ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರೆಬೆತ್ತಲೆ ಉರುಳು ಸೇವೆ: ರೈತರ ಆಕ್ರೋಶ

ಕಬ್ಬಿನ ಎಫ್ಆರ್‌ಪಿ ದರ ಹೆಚ್ಚಳಕ್ಕೆ ಒತ್ತಾಯ: ರೈತರ ಉರುಳು ಸೇವೆ
Last Updated 24 ನವೆಂಬರ್ 2022, 18:23 IST
ಅಕ್ಷರ ಗಾತ್ರ

ಬೆಂಗಳೂರು: ‘ಕಬ್ಬಿನ ಎಫ್ಆರ್‌ಪಿ ದರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟಿಸುತ್ತಿರುವ ರೈತರು, ಉದ್ಯಾನ ಎದುರಿನ ಮುಖ್ಯರಸ್ತೆಯಲ್ಲಿ ಗುರುವಾರ ಅರೆಬೆತ್ತಲೆ ಉರುಳು ಸೇವೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಅನಿರ್ದಿಷ್ಟ ಪ್ರತಿಭಟನೆ ನಡೆಯುತ್ತಿದೆ. ವಿವಿಧ ಜಿಲ್ಲೆಗಳಿಂದ ಸರದಿ ಪ್ರಕಾರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ರೈತರು, ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸುತ್ತಿದ್ದಾರೆ.

ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ ನಡೆಸಲು ರೈತರು ತೀರ್ಮಾನಿಸಿದ್ದರು. ಆದರೆ, ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಹೀಗಾಗಿ, ಉದ್ಯಾನದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ರೈತರ ಬೇಡಿಕೆ ಈಡೇರಿಸುವ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಆರೋಪಿಸಿದ ರೈತರು, ಅಂಗಿಗಳನ್ನು ಬಿಚ್ಚಿ ಅರೆಬೆತ್ತಲಾಗಿ ಗುರುವಾರ ಮಧ್ಯಾಹ್ನ ರಸ್ತೆಗೆ ಇಳಿದು ಉರುಳು ಸೇವೆ ಮಾಡಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸ್ಥಳದಲ್ಲಿದ್ದ ಪೊಲೀಸರು, ರೈತರನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಮುಖ್ಯಮಂತ್ರಿ ಮನೆಗೆ ಹೋಗಬೇಕು ಎಂದು ರೈತರು ಪಟ್ಟು ಹಿಡಿದಿದ್ದರು. ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದಂತೆ ಬಿಎಂಟಿಸಿ ಬಸ್‌ಗಳನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಪೊಲೀಸರು, ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಈ ವೇಳೆ ಮಾತಿನ ಚಕಮಕಿಯೂ ನಡೆಯಿತು.

ರೈತರನ್ನು ಸಮಾಧಾನಪಡಿಸಿದ ಪೊಲೀಸ್ ಅಧಿಕಾರಿಗಳು, ವಶಕ್ಕೆ ಪಡೆಯುವುದನ್ನು ಕೈಬಿಟ್ಟು ವಾಪಸ್ ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ, ಉದ್ಯಾನದಲ್ಲಿರುವ ಪೆಂಡಾಲ್‌ನಲ್ಲಿ ರೈತರು ಪ್ರತಿಭಟನೆ ಮುಂದುವರೆಸಿದರು.

‘ಎಫ್‌ಆರ್‌ಪಿ ದರ ಹೆಚ್ಚಿಸಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ದರ ಹೆಚ್ಚಳ ಬೇಡಿಕೆ ಈಡೇರಿಸುವವರೆಗೂ ಉದ್ಯಾನ ಬಿಟ್ಟು ಹೋಗುವುದಿಲ್ಲ’ ಎಂದು ಪ್ರತಿಭಟನಾನಿರತರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT