ಬೆಂಗಳೂರು: ಗೌರಿ–ಗಣೇಶ ಉತ್ಸವಕ್ಕೆ ಬಲವಂತವಾಗಿ ಚಂದಾ ವಸೂಲಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಎಚ್ಚರಿಕೆ ನೀಡಿದರು.
ಸೆಪ್ಟೆಂಬರ್ 7 ರಿಂದ ನಗರದಾದ್ಯಂತ ಸಾರ್ವಜನಿಕರು ಗೌರಿ-ಗಣೇಶ ಹಬ್ಬವನ್ನು ಆಚರಿಸುವ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಧೆ ಕಾಪಾಡಲು ಸೂಚಿಸಿರುವ 30 ಅಂಶಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಮೂರ್ತಿ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗಾಗಿ ಬಲವಂತವಾಗಿ ಹಾಗೂ ಕಾನೂನು ಬಾಹಿರವಾಗಿ ವಂತಿಗೆ ಸಂಗ್ರಹಿಸುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿವಾದಿತ ಸ್ಥಳದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಬಿಬಿಎಂಪಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆಯೋಜಕರು ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದರು.
ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಮೆರವಣಿಗೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಯಾವುದೇ ಅಪರಾಧ ನಡೆದರೆ ಆಯೋಜಕರೇ ಜವಾಬ್ದಾರರು. ಮೂರ್ತಿ ಪ್ರತಿಷ್ಠಾಪನಾ ಮಂಡಳಿಯ ಸಂಘಟಕರು ತಮ್ಮ ಮಂಡಳಿಯ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಇತರ ಪದಾಧಿಕಾರಿಗಳ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ನೀಡಬೇಕು ಎಂದು ತಿಳಿಸಿದರು.
ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಸಂಬಂಧಪಟ್ಟ ಠಾಣೆಯಿಂದ ಅನುಮತಿ ಪಡೆದು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
ಸಾರ್ವಜನಿಕರು ಹಾಗೂ ವಾಹನ ಸಂಚಾರ ದಟ್ಟಣೆ ರಸ್ತೆಗಳಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ.
ಸಾರ್ವಜನಿಕ ಸ್ಥಳದಲ್ಲಿ ಚಪ್ಪರ, ಶಾಮಿಯಾನ ಹಾಕಲು ಸಂಬಂಧಪಟ್ಟವರಿಂದ ಪರವಾನಗಿ ಪಡೆಯಬೇಕು.
ಹಿರಿಯ ನಾಗಕರಿಕರು, ಶಾಲಾ ಮಕ್ಕಳು ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ಮಾತ್ರ ಬಳಸಿಕೊಳ್ಳಲು ಸ್ಥಳೀಯ ಪೊಲೀಸರ ಅನುಮತಿ ಪಡೆಯಬೇಕು.
ಡಿ.ಜೆ. ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ.
ಮೆರವಣಿಗೆ ಸೂಕ್ಷ್ಮ, ಅತೀ ಸೂಕ್ಷ್ಮ ಸ್ಥಳ ಹಾಗೂ ಪ್ರಾರ್ಥನಾ ಸ್ಥಳಗಳ ಮುಂಭಾಗದಲ್ಲಿ ಸಾಗುವ ವೇಳೆ ಸಿಡಿಮದ್ದು, ಪಟಾಕಿಗಳನ್ನು ಸಿಡಿಸಬಾರದು ಹಾಗೂ ಕರ್ಪೂರಗಳನ್ನು ಹಚ್ಚಬಾರದು.
ಯಾವುದೇ ಕಾರಣಕ್ಕೂ ಮೆರವಣಿಗೆ ಮಾರ್ಗಗಳನ್ನು ಬದಲಾಯಿಸಬಾರದು. ಮಾರ್ಗಗಳನ್ನು ಬದಲಾಯಿಸಿದ್ದಲ್ಲಿ ಆಯೋಜಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು.
ಮೆರವಣಿಗೆಯು ರಾತ್ರಿ 10 ರೊಳಗೆ ಮುಗಿಯುವಂತೆ ಆಯೋಜಕರು ನೋಡಿಕೊಳ್ಳಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.