ಬುಧವಾರ, ಮೇ 18, 2022
25 °C

ದ್ವೇಷದ ಹೇಳಿಕೆ: ಪಿಐಎಲ್ ಆಗಿ ಪರಿವರ್ತಿಸಲು ಕೋರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷದ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಆಡಳಿತಾರೂಢ ಬಿಜೆಪಿಯ ಕೆಲ ಶಾಸಕರು, ಸಚಿವರು ಮತ್ತು ಸಂಸದರ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿರುವ ರಿಟ್ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸುವಂತೆ ಕೋರಲಾಗಿದೆ.

ಈ ಕುರಿತಂತೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಿವಾಸಿ ಮೊಹಮ್ಮದ್ ಖಲೀವುಲ್ಲಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ‘ಈ ಪ್ರಕರಣದಲ್ಲಿ ಅರ್ಜಿದಾರರು ಹೇಗೆ ಬಾಧಿತರಾಗಿದ್ದಾರೆ ಎಂಬುದನ್ನು ವಿವರಿಸಿ’ ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು.

ಅರ್ಜಿದಾರರ ಪರ ವಕೀಲ ರಹಮತ್ ಉಲ್ಲಾ ಕೊತ್ವಾಲ್, ‘ಅರ್ಜಿಯಲ್ಲಿ ಹೆಸರಿಸಲಾಗಿರುವ ಪ್ರತಿವಾದಿಗಳು ಮುಸ್ಲಿಂ ಸಮುದಾಯವನ್ನು ಅಪರಾಧಿಗಳು ಎಂಬಂತೆ ಬಿಂಬಿಸುತ್ತಿದ್ದಾರೆ’ ಎಂದು ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಹಾಗಾದರೆ ನೀವು ಸಕ್ಷಮ ನ್ಯಾಯಾಲಯದ ಮೊರೆ ಹೋಗಬಹುದು’ ಎಂದು ಸೂಚಿಸಿತು.

ಆಗ ಕೊತ್ವಾಲ್, ‘ಈ ರಿಟ್ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸಿ ಮಂಡಿಸಲು ಬಯಸಿದ್ದೇನೆ. ಅದಕ್ಕೆ ಅನುಮತಿ ನೀಡಬೇಕು’ ಎಂದು ಕೋರಿದರು.

ಈ ಮನವಿ ಪರಿಗಣಿಸಿದ ನ್ಯಾಯಪೀಠ, ‘ಈ ಕುರಿತಂತೆ ಅರ್ಜಿದಾರರು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಸೂಕ್ತ ಜ್ಞಾಪನಾ ಪತ್ರ ಮಂಡಿಸಬೇಕು. ಮುಖ್ಯ ನ್ಯಾಯಮೂರ್ತಿಗಳ ಸೂಚನೆ ಅನುಸಾರ ಅರ್ಜಿಯನ್ನು ರೋಸ್ಟರ್ ಪೀಠದ (ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುವ ಪೀಠ) ಮುಂದೆ ವಿಚಾರಣೆಗೆ ನಿಗದಿಪಡಿಸಬಹುದು’ ಎಂದು ರಿಜಿಸ್ಟ್ರಾರ್ ಜನರಲ್‌ ಅವರಿಗೆ ನಿರ್ದೇಶಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು