ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನೀರಿಗಾಗಿ ನಿರಂತರ ಹೋರಾಟ: ಎಚ್.ಡಿ. ದೇವೇಗೌಡ

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿಕೆ
Published 19 ಜನವರಿ 2024, 16:03 IST
Last Updated 19 ಜನವರಿ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಈ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಬಗೆಹರಿಸಲು ಸಾಧ್ಯ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.

ಕರ್ನಾಟಕ ರಾಜ್ಯ ಒಕ್ಕಲಿಗರ ಡೈರೆಕ್ಟರಿ ಟ್ರಸ್ಟ್ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಬಾಲಗಂಗಾಧರನಾಥ ಸ್ವಾಮೀಜಿ ಅವರ 79ನೇ ಜಯಂತಿ ಹಾಗೂ ಟ್ರಸ್ಟ್‌ನ ಬೆಳ್ಳಿ ಹಬ್ಬ ಉದ್ಘಾಟಿಸಿ, ಮಾತನಾಡಿದರು. 

‘ಕಾವೇರಿ ನದಿ ನೀರು ನಿಯಂತ್ರಣಾ ಪ್ರಾಧಿಕಾರದ ಆದೇಶದ ಪ್ರಕಾರ ರಾಜ್ಯವು ಫೆಬ್ರವರಿ ತಿಂಗಳಲ್ಲಿ ಪ್ರತಿದಿನ 998 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು. ಇಷ್ಟು ಪ್ರಮಾಣದಲ್ಲಿ ನೀರನ್ನು ಹರಿಸಲು ಇಲ್ಲಿ ನೀರು ಎಲ್ಲಿದೆ? ಒಂದು ವೇಳೆ ನೀರನ್ನು ಹರಿಸಿದರೆ ಇಲ್ಲಿನ ರೈತರು ಏನು ಮಾಡಬೇಕು? ಈ ಸಮಸ್ಯೆ ಬಗ್ಗೆ ನಾನು ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ. ತಮಿಳುನಾಡಿನಲ್ಲಿ ಇರುವವರು ನಮ್ಮ ಸಹೋದರರಾದರೂ ಒಂದು ಮಿತಿಯಲ್ಲಿ ಇರಬೇಕಾಗುತ್ತದೆ’ ಎಂದು ಹೇಳಿದರು.

‘ನಮ್ಮ ರೈತರ ಬಗೆಗಿನ ಕಾಳಜಿಯಿಂದ ಬಿಜೆಪಿ ಜತೆಗೆ ಕೈಜೋಡಿಸಿದ್ದೇವೆಯೇ ಹೊರತು, ವೈಯಕ್ತಿಕ ಲಾಭಕ್ಕಾಗಿ ಅಲ್ಲ’ ಎಂದು ತಿಳಿಸಿದರು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ‘ಬಾಲಗಂಗಾಧರನಾಥ ಸ್ವಾಮೀಜಿ ಅವರು ಈ ನಾಡು ಕಂಡ ಮಹಾನ್ ಚೇತನ. ಧಾರ್ಮಿಕ ಶಕ್ತಿ, ಸಂಘಟನಾ ಸಾಮರ್ಥ್ಯದಿಂದ ಅವರು ಆರೋಗ್ಯ ಸೇರಿ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿ ಮಾಡಿದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಬಾಲಗಂಗಾಧರನಾಥ ಸ್ವಾಮೀಜಿ ಅವರು ವಿವಿಧ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿಕೊಂಡರು.

ಕರ್ನಾಟಕ ರಾಜ್ಯ ಒಕ್ಕಲಿಗರ ಡೈರೆಕ್ಟರಿ ಟ್ರಸ್ಟ್‌ನ ಅಧ್ಯಕ್ಷ ಕೆ.ಟಿ. ಚಂದ್ರು, ‘ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜಯಂತಿಯನ್ನು ಆಚರಿಸಿದ್ದೇವೆ. ಸರ್ಕಾರವು ಬಾಲಗಂಗಾಧರನಾಥ ಸ್ವಾಮೀಜಿ ಅವರ ಜಯಂತಿ ಆಚರಣೆಗೆ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT