ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ಲಕ್ಕಿಡಿಪ್‌ ಮುಖ್ಯಮಂತ್ರಿ: ಸಚಿವ ಅಶೋಕ್‌ ಲೇವಡಿ

ಸಿ.ಟಿ.ರವಿ, ವಿಜಯೇಂದ್ರ, ಡಿವಿಎಸ್‌ ಪ್ರಚಾರ
Last Updated 29 ನವೆಂಬರ್ 2019, 4:54 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ‘ಲಕ್ಕಿ ಡಿಪ್‌ ಮುಖ್ಯಮಂತ್ರಿ’ ಎಂದು ಕಂದಾಯ ಸಚಿವ ಆರ್.ಅಶೋಕ್‌ ಲೇವಡಿ ಮಾಡಿದರು.

ಯಶವಂತಪುರ ಕ್ಷೇತ್ರದ ಕಗ್ಗಲಿಪುರದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿ, ‘ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದಾಗಿ ಕುಮಾರಸ್ವಾಮಿ ಕನಸು ಕಾಣುತ್ತಿದ್ದಾರೆ. ಅದು ಎಂದಿಗೂ ಈಡೇರುವುದಿಲ್ಲ’ ಎಂದು ಹೇಳಿದರು.

‘ಕಾಂಗ್ರೆಸ್‌– ಜೆಡಿಎಸ್‌ ನಾಯಕರ ಹಾವು– ಮುಂಗುಸಿ ಜಗಳದಿಂದ ಬೇಸತ್ತು 17 ಶಾಸಕರು ರಾಜೀನಾಮೆ ನೀಡಿದ್ದಾರೆ. ಮೈತ್ರಿ ಸರ್ಕಾರ ಪತನಗೊಳ್ಳಲು ಸಿದ್ದರಾಮಯ್ಯ ಅವರೇ ನೇರ ಕಾರಣ’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮಾತನಾಡಿ, ‘ಸಿದ್ದರಾಮಯ್ಯ ಅವರು ಪಕ್ಷದಲ್ಲಿದ್ದುಕೊಂಡೇ ಪಕ್ಷ ದ್ರೋಹದ ಕೆಲಸ ಮಾಡುತ್ತಿದ್ದಾರೆ. ಅವರು ಬೆನ್ನಿಗೆ ಚೂರಿ ಹಾಕುತ್ತಾರೆ ಎಂದೇ ಶಾಸಕರು ರಾಜೀನಾಮೆ ನೀಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮುಲು ಇನ್ನೊಂದು ವಾರ ಹೆಚ್ಚಾಗಿ ಪ್ರಚಾರ ನಡೆಸಿದ್ದರೆ ಸಿದ್ದರಾಮಯ್ಯ ಅವರಿಗೆ ಠೇವಣಿ ಉಳಿಸಿಕೊಳ್ಳುವುದು ಕಷ್ಟವಾಗುತ್ತಿತ್ತು ಎಂದು ಹೇಳಿದರು.

ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಅವರು ಯಶವಂತಪುರ ಕ್ಷೇತ್ರದಲ್ಲಿ ರೋಡ್‌ ಶೋ ಮತ್ತು ಬೈಕ್‌ ರ‍್ಯಾಲಿ ನಡೆಸಿದರು.

ಡಿವಿಎಸ್‌ ಪ್ರಚಾರ: ಮಹಾಲಕ್ಷ್ಮಿಲೇಔಟ್‌ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೋಪಾಲಯ್ಯ ಪರವಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಚಿವ ಎಸ್‌.ಸುರೇಶ್‌ಕುಮಾರ್‌ ವಿವಿಧ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದರು.

ಶಿವಾಜಿನಗರದಲ್ಲಿ ರೋಡ್‌ ಶೋ: ಶಿವಾಜಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಸರವಣ ಪರವಾಗಿ ಸಿ.ಟಿ.ರವಿ ಮತ್ತು ಮುಖಂಡ ಪೋನ್‌ ರಾಧಾಕೃಷ್ಣ ಸಂಪಂಗಿರಾಮನಗರದಲ್ಲಿ ರೋಡ್‌ ಶೋ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರವಿ, ‘ಸರವಣ ಬಿಬಿಎಂಪಿ ಸದಸ್ಯರಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಜನರ ಸಮಸ್ಯೆಗಳಿಗೂ ಸ್ಪಂದಿಸುತ್ತಿದ್ದರು. ಶಾಸಕರಾದ ಬಳಿಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಸಾಧ್ಯ. ಸರ್ಕಾರವೂ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಗಮನ ನೀಡಲಿದೆ’ ಎಂದು ಹೇಳಿದರು.

‘ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಬೆಲೆ ಇದೆ. ಉತ್ತಮ ಅವಕಾಶಗಳನ್ನು ನೀಡುತ್ತದೆ. ನನ್ನ ಮೇಲೆ ವಿಶ್ವಾಸವಿಟ್ಟು ಟಿಕೆಟ್‌ ನೀಡಿದ್ದಾರೆ. ಆ ವಿಶ್ವಾಸಕ್ಕೆ ಚ್ಯುತಿಯಾಗದಂತೆ ಕೆಲಸ ಮಾಡುತ್ತೇನೆ’ ಎಂದು ಸರವಣ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT