ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿಕಲಾ ಕೇಸ್–ಎಸಿಬಿ ಮನವಿ ಬಗ್ಗೆ ನಿರ್ಧಾರ ಪ್ರಕಟಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ

ವಿ.ಕೆ. ಶಶಿಕಲಾಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಆರೋಪ
Last Updated 16 ಡಿಸೆಂಬರ್ 2021, 15:26 IST
ಅಕ್ಷರ ಗಾತ್ರ

ಬೆಂಗಳೂರು: ‘ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿ.ಕೆ. ಶಶಿಕಲಾಗೆ ವಿಶೇಷ ಸೌಲಭ್ಯ ಒದಗಿಸಲು ಲಂಚ ಪಡೆದ ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ಕ್ರಮ ಕೈಗೊಳ್ಳಲು ಪೂರ್ವಾನುಮತಿ ಕೋರಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಲ್ಲಿಸಿರುವ ಮನವಿ ಕುರಿತಂತೆ ಎರಡು ವಾರಗಳಲ್ಲಿ ನಿರ್ಧಾರ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

‘ಪ್ರಕರಣದ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಿ ಚೆನ್ನೈ ನಿವಾಸಿಯಾದ ಶಿಕ್ಷಣ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್. ಗೀತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದ ಮಂಡಿಸಿ, ಈಗಾಗಲೇ ಎಸಿಬಿ ತನಿಖೆಯನ್ನು ಪೂರ್ಣಗೊಳಿಸಿದೆ. ಪ್ರಕರಣದಲ್ಲಿ ಭಾಗಿಯಾಗಿದವರ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಪೂರ್ವಾನುಮತಿ ಕೋರಿ ತನಿಖಾ ವರದಿಯನ್ನು ಸಕ್ಷಮ ಪ್ರಾಧಿಕಾರ ಗೃಹ ಇಲಾಖೆ ಕಾರ್ಯದರ್ಶಿಗೆ 2021ರ ಜುಲೈ ತಿಂಗಳಲ್ಲಿ ರವಾನಿಸಿದೆ. 20 ದಿನಗಳ ಹಿಂದೆ ಆ ವರದಿಯನ್ನು ಕಾರ್ಯದರ್ಶಿಗಳು ಪರಿಶೀಲನೆ ನಡೆಸಿ, ಅನುಮೋದನೆಗಾಗಿ ಕಡತವನ್ನು ಗೃಹ ಸಚಿವರಿಗೆ ಸಲ್ಲಿಸಿದ್ದಾರೆ. ಗೃಹ ಸಚಿವರು ವರದಿಗೆ ಸಹಿ ಹಾಕಿ ಅನುಮೋದನೆ ನೀಡಬೇಕಿದೆ. ಪೂರ್ವಾನುಮತಿ ದೊರೆಯದೆ ದೋಷಾರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಾಧ್ಯವಾಗುವುದಿಲ್ಲ’ ಎಂದು ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪೂರ್ವಾನುಮತಿ ಕೋರಿದ ಮನವಿ ಮೇಲೆ ನಿರ್ಧಾರ ಕೈಗೊಳ್ಳಲು ಎಷ್ಟು ಸಮಯ ಬೇಕಿದೆ’ ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರಿ ವಕೀಲರು, ‘ಸದ್ಯ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಗೃಹ ಸಚಿವರು ಅಲ್ಲಿಯೇ ಇದ್ದಾರೆ ಹೀಗಾಗಿ ಎರಡು ವಾರ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT