ಶುಕ್ರವಾರ, ಮಾರ್ಚ್ 24, 2023
31 °C

ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ ಕಾಪಾಡಿ: ಬೆಸ್ಕಾಂಗೆ ಹೈಕೋರ್ಟ್ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪಾದಚಾರಿ ಮಾರ್ಗಗಳೂ ಸೇರಿದಂತೆ ವಿದ್ಯುತ್ ಪ್ರಸರಣ ಘಟಕಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಎಚ್ಚರ ವಹಿಸಬೇಕು‘ ಎಂದು ಹೈಕೋರ್ಟ್, ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನಿರ್ದೇಶಿಸಿದೆ. 

‘ಬೆಂಗಳೂರು ಮಹಾನಗರದಲ್ಲಿ ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲೆ ಅಳವಡಿಸ ಲಾಗಿರುವ ಟ್ರಾನ್ಸ್‌ಫಾರ್ಮರ್‌ ತೆರವು ಗೊಳಿಸಲು ನಿರ್ದೇಶಿಸಬೇಕು’ ಎಂದು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್, ‘ಟ್ರಾನ್ಸ್‌ ಫಾರ್ಮರ್‌ ಅಳವಡಿಕೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುತ್ತಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ನ್ಯಾಯಪೀಠ, ‘ಟ್ರಾನ್ಸ್‌ ಫಾರ್ಮರ್ ಸೇರಿದಂತೆ ವಿದ್ಯುತ್ ಘಟಕಗಳ ಸುತ್ತಲ ಜಾಗಗಳಲ್ಲಿ ಸಾರ್ವ ಜನಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ನೈರ್ಮಲ್ಯ ಕಾಪಾಡಬೇಕು‘ ಎಂದು ಸೂಚಿಸಿತು.

ವರದಿ ಸಲ್ಲಿಸಿ: ‘ಒಟ್ಟು 2,587 ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಈವರೆಗೂ 1,554 ಟ್ರಾನ್ಸ್‌ಫಾರ್ಮರ್‌ಗಳನ್ನು
ಸ್ಥಳಾಂತರಿಸಲಾಗಿದ್ದು, 1,033 ಬಾಕಿ ಉಳಿದಿವೆ. ಇವುಗಳ ಸ್ಥಳಾಂತರ ಕಾರ್ಯ ವನ್ನು ಹಂತ ಹಂತವಾಗಿ ಮಾಡಲಾಗುತ್ತಿದ್ದು 2023ರ ಸೆಪ್ಟೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು’ ಎಂದು ಬೆಸ್ಕಾಂ ಪರ ವಕೀಲರು ನ್ಯಾಯ ಪೀಠಕ್ಕೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರತಿ ತಿಂಗಳೂ ಸ್ಥಳಾಂತರ ಮಾಡಿದ ಟ್ರಾನ್ಸ್‌ಫಾರ್ಮರ್‌ಗಳ ವಿವರವನ್ನು ನ್ಯಾಯಪೀಠಕ್ಕೆ ಒದಗಿಸಬೇಕು‘ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು