ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ದಟ್ಟಣೆ: ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆಗೆ ಹೈಕೋರ್ಟ್‌ ಸೂಚನೆ

6 ವಾರಗಳಲ್ಲಿ ಅನುಪಾಲನಾ ವರದಿ ಸಲ್ಲಿಲು ಸರ್ಕಾರಕ್ಕೆ ಆದೇಶ
Published 12 ಸೆಪ್ಟೆಂಬರ್ 2023, 23:30 IST
Last Updated 12 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ದಿನನಿತ್ಯ ಉಂಟಾಗುತ್ತಿರುವ ವಾಹನ ದಟ್ಟಣೆ ತಪ್ಪಿಸಲು ಶಾಲೆಗಳು ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.

ಈ ಸಂಬಂಧ ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಸಂಬಂಧಿಸಿದ ಪಾಲುದಾರರ ಸಭೆ ಕರೆದು ಚರ್ಚೆ ನಡೆಸುವಂತೆ ನ್ಯಾಯಾಲಯ ತಾಕೀತು ಮಾಡಿದೆ.

ಬಳ್ಳಾರಿ ರಸ್ತೆ ವಿಸ್ತರಣೆ ಸಂಬಂಧ ಸರ್ಕಾರೇತರ ಸಂಸ್ಥೆ ಸಮರ್ಪಣಾ ಸಾಮಾಜಿಕ- ಸಾಂಸ್ಕೃತಿಕ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಾಲಯ ‘ರಾಜ್ಯ ಸರ್ಕಾರ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೂಲಕ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಶಾಲಾ ಬಸ್ ಆಪರೇಟರ್‌ಗಳು, ಪೋಷಕರ ಸಂಘಗಳು ಸೇರಿ ಸಂಬಂಧಿಸಿದ ಎಲ್ಲರ ಸಭೆ ಕರೆಯಬೇಕು. ವಾಹನ ದಟ್ಟಣೆ ತಗ್ಗಿಸಲು ಶಾಲಾ ಸಮಯ ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬಹುದು. ಈ ವೇಳೆ ಶಾಲಾ ಮಕ್ಕಳ ಸುರಕ್ಷತೆ ಮತ್ತು ಭದ್ರತೆಯನ್ನೂ ಪರಿಗಣಿಸಬೇಕಾಗುತ್ತದೆ’ ಎಂದು ನಿರ್ದೇಶನ ನೀಡಿದೆ.

ಅಂತೆಯೇ, ಕೈಗಾರಿಕೆ ಮತ್ತು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೂಲಕ ಎಲ್ಲ ಕೈಗಾರಿಕೆಗಳ ಒಕ್ಕೂಟಗಳು, ಕಾರ್ಮಿಕ ಸಂಘಟನೆಗಳು, ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆಗಳ ಒಕ್ಕೂಟ, ಕಂಪನಿಗಳ ಪ್ರತಿನಿಧಿಗಳ ಜತೆ ಚರ್ಚೆ ನಡೆಸಿ ಕೆಲಸದ ಅವಧಿಯನ್ನು ಬದಲಾವಣೆ ಮಾಡಬಹುದು ಎಂದು ನ್ಯಾಯಪೀಠ ಸೂಚಿಸಿತು.

ದುಡಿಯುವ ಸಮಯವನ್ನು ಸರಳಗೊಳಿಸುವುದು, ಜನದಟ್ಟಣೆ ಸಮಯದಲ್ಲಿ ವಾಹನ ದಟ್ಟಣೆ ತಗ್ಗಿಸುವ ಸಂಬಂಧ ಸಂಬಂಧಿಸಿದ ಎಲ್ಲರಿಂದಲೂ ಸಲಹೆ-ಸೂಚನೆಗಳನ್ನು ಪಡೆದು ಸರ್ಕಾರ ಮುಂದುವರಿಯಬಹುದು ಎಂದು ನ್ಯಾಯಾಲಯ ಹೇಳಿತು.

ಸಾದಹಳ್ಳಿ ಗೇಟ್‌ನಿಂದ ಹೆಬ್ಬಾಳ ಮೇಲ್ಸೇತುವೆವರೆಗೆ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಭಾರಿ ವಾಹನಗಳು ನಗರಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಿ 2014ರಲ್ಲಿ ನಗರ ಪೊಲೀಸ್ ಕಮಿಷನರ್‌ ಹೊರಡಿಸಿದ್ದ ಆದೇಶವನ್ನು ಉಲ್ಲೇಖಿಸಿದ ನ್ಯಾಯಪೀಠ ‘ನಮ್ಮ ಪ್ರಕಾರ ಈ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದೇ ಆದರೆ ವಾಹನ ದಟ್ಟಣೆ ಖಂಡಿತಾ ತಗ್ಗುತ್ತದೆ’ ಎಂದಿತು.

ಮೆಟ್ರೊ ರೈಲು ಮಾರ್ಗ ವಿಸ್ತರಣೆ, ರೈಲುಗಳ ಸಮಯ ವಿಸ್ತರಣೆ ಸೇರಿದಂತೆ 2023–24ನೇ ವರ್ಷಕ್ಕೆ ಯೋಜನಾ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಆ ಕಾರ್ಯವನ್ನು ತ್ವರಿತವಾಗಿ ಮಾಡಬೇಕು ಎಂದು ನ್ಯಾಯಾಲಯ ಸೂಚನೆ ನೀಡಿತು.

ಅರ್ಜಿದಾರರು ನೀಡಿರುವ ಸಲಹೆಗಳು, ಈ ನ್ಯಾಯಪೀಠ ನೀಡಿರುವ ನಿರ್ದೇಶನಗಳನ್ನು ಆಧರಿಸಿ ವಾಹನ ದಟ್ಟಣೆ ತಗ್ಗಿಸಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆರು ವಾರಗಳಲ್ಲಿ ವಸ್ತು ಸ್ಥಿತಿ ವರದಿ ಹಾಗೂ ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

ಮೈಸೂರು ವಿ.ವಿ ಕುಲಪತಿ ನೇಮಕ: ಆದೇಶ ರದ್ದು

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದು ಕೋರಿ ಪ್ರೊ.ಶರತ್ ಅನಂತಮೂರ್ತಿ ಮತ್ತು ಡಾ.ಜಿ. ವೆಂಕಟೇಶ್‌ ಕುಮಾರ್‌ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎನ್‌.ಎಸ್‌. ಸಂಜಯ್‌ ಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿ ಈ ಕುರಿತಂತೆ ಆದೇಶಿಸಿದೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ-2000ರ ಮತ್ತು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ-20018ರ ನಿಯಮಗಳ ಅನುಸಾರ ಮೈಸೂರು ವಿವಿ ಕುಲಪತಿ ಹುದ್ದೆಗೆ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.

ಲೋಕನಾಥ್‌ ಅವರನ್ನು ಮೈಸೂರು ವಿವಿ ಕುಲಪತಿ ಹುದ್ದೆಗೆ ನೇಮಕ ಮಾಡುವ ವೇಳೆ ನಿಯಮಾವಳಿಗಳನ್ನು ಸೂಕ್ತವಾಗಿ ಪಾಲನೆ ಮಾಡಿಲ್ಲ. ಇದರಿಂದ ಅವರ ನೇಮಕಾತಿಯನ್ನು ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಬಿಡುಗಡೆಯಾಗ ಬೇಕಿದ್ದು, ರಾಜ್ಯ ಸರ್ಕಾರವು ಮೈಸೂರು ವಿವಿ ಕುಲಪತಿ ನೇಮಕ ಪ್ರಕ್ರಿಯೆಯನ್ನು ಹೊಸದಾಗಿ ಮಾಡಬೇಕು. ಅದಕ್ಕಾಗಿ ಹಿಂದಿನ ಶೋಧನಾ ಸಮಿತಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಕುಲಪತಿ ಹುದ್ದೆಗೆ ಅರ್ಹರಾದವರ ಮೂವರು ಹೆಸರು ಸೂಚಿಸಲು ಹೊಸದಾಗಿ ಶೋಧನಾ ಸಮಿತಿಯನ್ನು ರಚನೆ ಮಾಡಬೇಕು. ಲೋಕನಾಥ್‌ ಅವರ ಅರ್ಜಿ ಸೇರಿದಂತೆ ಎಲ್ಲಾ ಅರ್ಹರ ಅರ್ಜಿಗಳನ್ನು ಹೊಸದಾಗಿ ಪರಿಗಣಿಸಬೇಕು. ನಂತರ ಅರ್ಹರ ಹೆಸರನ್ನು ರಾಜ್ಯ ಸರ್ಕಾರಕ್ಕೆ ರವಾನಿಸಬೇಕು ಎಂದು ಸೂಚಿಸಿದೆ.

ಸಮಿತಿಯು ಶಿಫಾರಸು ಮಾಡಿದ ಮೂವರು ಅರ್ಹರ ಹೆಸರನ್ನು ರಾಜ್ಯಪಾಲರಿಗೆ ಕಳುಹಿಸಬೇಕು. ಬಳಿಕ, ರಾಜ್ಯಪಾಲರು ಆ ಮೂವರ ಹೆಸರಲ್ಲಿ ಒಬ್ಬರ ಹೆಸರು ಅಂತಿಮಗೊಳಿಸಿ, ರಾಜ್ಯ ಸರ್ಕಾರದಿಂದ ಒಪ್ಪಿಗೆ ಪಡೆದ ನಂತರ ಕುಲಪತಿ ಹುದ್ದೆಗೆ ತಮ್ಮ ನಾಮಿನಿಯನ್ನು ನೇಮಕ ಪ್ರಕ್ರಿಯೆಯನ್ನು ಹೊಸದಾಗಿ ಮಾಡಬೇಕು. ಅದಕ್ಕಾಗಿ ಹಿಂದಿನ ಶೋಧನಾ ಸಮಿತಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಕುಲಪತಿ ಹುದ್ದೆಗೆ ಅರ್ಹರಾದವರ ಮೂವರು ಹೆಸರು ಸೂಚಿಸಲು ಹೊಸದಾಗಿ ಶೋಧನಾ ಸಮಿತಿಯನ್ನು ರಚನೆ ಮಾಡಬೇಕು. ಲೋಕನಾಥ್‌ ಅವರ ಅರ್ಜಿ ಸೇರಿದಂತೆ ಎಲ್ಲಾ ಅರ್ಹರ ಅರ್ಜಿಗಳನ್ನು ಹೊಸದಾಗಿ ಪರಿಗಣಿಸಬೇಕು. ನಂತರ ಅರ್ಹರ ಹೆಸರನ್ನು ರಾಜ್ಯ ಸರ್ಕಾರಕ್ಕೆ ರವಾನಿಸಬೇಕು ಎಂದು ತಿಳಿಸಿದೆ.

ಪ್ರಕರಣವೇನು?

ಕುಲಪತಿಯಾಗಿ ನೇಮಕವಾಗುವವರ ವಿರುದ್ಧ ಯಾವುದೇ ಕ್ರಿಮಿನಲ್‌ ಪ್ರಕರಣ ಬಾಕಿ ಇರಬಾರದು. ಆದರೆ, ಕುಲಪತಿಯಾಗಿ ನೇಮಕಗೊಂಡಿರುವ ಲೋಕನಾಥ್ ವಿರುದ್ಧ ಕ್ರಿಮಿನಲ್ ಪ್ರಕರಣ ಬಾಕಿ ಇದೆ. ಆದರೆ, ಆ ವಿಷಯವನ್ನು ಅವರು ಮರೆಮಾಚಿದ್ದಾರೆ. ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ವಿರುದ್ಧವಾಗಿ ಹಾಗೂ ನಿಯಮಗಳನ್ನು ಗಾಳಿಗೆ ತೂರಿ ಲೋಕನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT