ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಂದಲೇ ಅತಿಕ್ರಮಣ: ಕ್ರಮದ ವರದಿ ಕೇಳಿದ ಹೈಕೋರ್ಟ್

Last Updated 3 ಆಗಸ್ಟ್ 2021, 23:44 IST
ಅಕ್ಷರ ಗಾತ್ರ

ಬೆಂಗಳೂರು: ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಿಮಿನಲ್ ಕಾನೂನು ಜಾರಿಗೊಳಿಸುವಂತೆ ನೀಡಿದ್ದ ಆದೇಶ ಪಾಲನೆ ಮಾಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಲೆಟ್ಜ್‌ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

ಪಾದಚಾರಿ ಮಾರ್ಗದ ಮೇಲೆ ವಾಹನ ನಿಲುಗಡೆ ನಿಷೇಧವಿದೆ. ಆದರೂ, ಪೊಲೀಸರೇ ಅತಿಕ್ರಮಣ ಮಾಡಿಕೊಂಡಿದ್ದಾರೆ. ಮೋಟಾರು ವಾಹನ ಕಾಯ್ದೆ, ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಇವರ ವಿರುದ್ಧ ಕ್ರಿಮಿನಲ್ ಕಾನೂನು ಜಾರಿಗೊಳಿಸಲಾಗಿದೆಯೇ ಎಂಬುದನ್ನು ಖಚಿತಪಡಿಸುವಂತೆ ಬಿಬಿಎಂಪಿಗೆ ಪೀಠ ತಿಳಿಸಿತು.

ಪಾದಚಾರಿ ಮಾರ್ಗಗಳನ್ನು ಪೊಲೀಸರು, ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಮತ್ತು ಬೆಸ್ಕಾಂ ಆಕ್ರಮಿಸಿಕೊಂಡಿವೆ ಎಂದು ಆರೋಪಿಸಿರುವ ಅರ್ಜಿದಾರರು, ಜಯನಗರ ಠಾಣೆ ಎದುರಿನ ಪಾದಚಾರಿ ಮಾರ್ಗದಲ್ಲಿ ಪೊಲೀಸರು ನಿಲ್ಲಿಸಿರುವ ವಾಹನಗಳ ಚಿತ್ರಗಳನ್ನು ಪೀಠಕ್ಕೆ ಸಲ್ಲಿಸಿದರು.

ಈ ಹಿಂದಿನ ಆದೇಶದ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ತಿಳಿವಳಿಕೆ ಮೂಡಿಸಲಾಗಿತ್ತು ಎಂದು ಬಿಬಿಎಂಪಿ ಪ್ರತಿನಿಧಿಸುವ ವಕೀಲರು ಮೆಮೊ ಸಲ್ಲಿಸಿದರು. ಸಂಚಾರ ಪೊಲೀಸರು ಮತ್ತು ಬಿಬಿಎಂಪಿ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು. ಆ.23ರೊಳಗೆ ವರದಿ ಸಲ್ಲಿಸಬೇಕು ಎಂದು ಪೀಠ ಸೂಚನೆ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT