ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಸ್ತೃತ ವರದಿ ಸಲ್ಲಿಕೆಗೆ ಹೈಕೋರ್ಟ್‌ ಆದೇಶ: ಡಿಕೆಶಿಗೆ ಮತ್ತೊಂದು ಕಂಟಕ

ಅಕ್ರಮ ಗಣಿಗಾರಿಕೆ ಆರೋಪ
Last Updated 10 ಅಕ್ಟೋಬರ್ 2019, 20:06 IST
ಅಕ್ಷರ ಗಾತ್ರ

ಬೆಂಗಳೂರು: ’ಕನಕಪುರ ಮತ್ತ ಸಾತನೂರು ವ್ಯಾಪ್ತಿಯ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಅರಣ್ಯ ಒತ್ತುವರಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಾಸಕ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮತ್ತೆ ಜೀವ ಬಂದಂತಾಗಿದೆ. ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ವಿಸ್ತೃತ ವರದಿ ಸಲ್ಲಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

‘ಅಕ್ರಮ ಗಣಿಗಾರಿಕೆ, ಅರಣ್ಯ ನಾಶ ಹಾಗೂ ಖಜಾನೆಗೆ ನಷ್ಟ ಉಂಟು ಮಾಡಿದ ಆರೋಪದಡಿ ಶಾಸಕ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ವಿರುದ್ಧದ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು' ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ ಎಸ್. ಓಕಾ ಹಾಗೂ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌.ದೇವದಾಸ್‌ ಅವರು, ‘ಈ ಹಿಂದಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಯು.ವಿ.ಸಿಂಗ್‌ ಅವರು ಕನಕಪುರ ಮತ್ತು ಸಾತನೂರು ವ್ಯಾಪ್ತಿಯ 63 ಗ್ರಾಮಗಳ 684 ಗಣಿ ಪ್ರದೇಶಗಳನ್ನು ಪರಿಶೀಲಿಸಿ ಅಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತಂತೆ ನೀಡಲಾದ ವರದಿಯನ್ನು ಆಧರಿಸಿ ಈ ದಾವೆ ಹೂಡಲಾಗಿದೆ’ ಎಂದು ವಿವರಿಸಿದರು.

‘ಸಂರಕ್ಷಿತ ಮತ್ತು ವನ್ಯಜೀವಿಗಳ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ 2006–07ರಲ್ಲಿ ಒಟ್ಟು 67 ಜನರ ವಿರುದ್ಧ ಸಿಐಡಿ ತನಿಖೆ ನಡೆಸಲಾಗಿದೆ. ಗಡಿಗಳನ್ನು ಗುರುತಿಸುವಲ್ಲಿ ಸ್ಪಷ್ಟತೆ ಇಲ್ಲ ಎಂಬ ಕಾರಣಕ್ಕೆ ಸಿಐಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ವರದಿ ನೀಡಿದ ಕಾರಣ ತನಿಖೆಯ ಫಲಶ್ರುತಿ ದುರ್ಬಲವಾಗಿದೆ’ ಎಂದರು.

‘ಅಕ್ರಮ ಆರೋಪ ಎದುರಿಸುತ್ತಿರುವ ಒಟ್ಟು 22 ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ. ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ. ಆದರೆ, ಈತನಕ ಯಾವುದೇ ಪ್ರಗತಿಯಾಗಿಲ್ಲ. ಆದ್ದರಿಂದ ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳ ಬಗೆಗಿನ ವಸ್ತುಸ್ಥಿತಿ ವರದಿಯನ್ನು ಡಿಸೆಂಬರ್ 5ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ಸರ್ಕಾರದ ಪರ ವಕೀಲರಿಗೆ ಆದೇಶಿಸಿ ವಿಚಾರಣೆ ಮುಂದೂಡಿದೆ.

ಕನಕಪುರ ತಾಲ್ಲೂಕಿನ ಬಿ.ಸಿ.ನಾರಾಯಣ ಸ್ವಾಮಿ ಹಾಗೂ ಎ.ಸಿ.ಶಿವರಾಜು 2103ರ ಸೆ‍ಪ್ಟೆಂಬರ್‌ನಲ್ಲಿ ಈ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್, ಅವರ ಪತ್ನಿ ಉಷಾ ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್‌ ಸೇರಿದಂತೆ ಒಟ್ಟು 64 ಪ್ರತಿವಾದಿಗಳಿದ್ದಾರೆ. ಇವರೆಲ್ಲಾ ಅರಣ್ಯ ನಾಶ, ಅರಣ್ಯ ಗಡಿ ಒತ್ತುವರಿ, ಖಜಾನೆಗೆ ನಷ್ಟ ಉಂಟು ಮಾಡಿದಂತಹ ಗುರುತರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಈ ಪ್ರಕರಣ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬರುತ್ತಿರುವ ಮೂರನೇ ಸುತ್ತಿನ ಕಾನೂನು ಹೋರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT