ಆಂಬುಲೆನ್ಸ್ ಕಮಾಂಡ್ ಸೆಂಟರ್: ಹೈಕೋರ್ಟ್ ಮೇಲ್ವಿಚಾರಣೆ

ಬೆಂಗಳೂರು: ಆಂಬುಲೆನ್ಸ್ ಸೇವೆಗಳಿಗಾಗಿ ಕಮಾಂಡ್ ಕಂಟ್ರೋಲ್ ರೂಮ್ ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ಟೆಂಡರ್ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡುವುದಾಗಿ ಹೈಕೋರ್ಟ್ ಹೇಳಿದೆ.
₹1,800 ಕೋಟಿ ಮೊತ್ತದ ಯೋಜನೆಯನ್ನು ಶೀಘ್ರವೇ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು 5 ತಿಂಗಳ ಕಾಲಾವಕಾಶ ಕೋರಿದೆ.
ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
‘ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕರೆದೊಯ್ಯುವ ಆಂಬುಲೆನ್ಸ್‌ಗಳು ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳುತ್ತವೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ರೋಗಿಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯುವುದು ವಿಳಂಬವಾಗುತ್ತಿದೆ. ಕಮಾಂಡ್ ಕಂಟ್ರೋಲ್ ರೂಮ್ ತೆರೆದರೆ ಸಮಸ್ಯೆ ಬಗೆಹರಿಯಲಿದೆ. ಇದಕ್ಕಾಗಿ ಸರ್ಕಾರ ಟೆಂಡರ್ ಪ್ರಕ್ರಿಯೆ ನಡೆಸಿದರೆ ವಿಳಂಬವಾಗುತ್ತದೆ. ಹೀಗಾಗಿ ಕೆಟಿಪಿಪಿ ಕಾಯ್ದೆಯಿಂದ ವಿನಾಯಿತಿ ಕೋರಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
‘ಕಮಾಂಡ್ ಸೆಂಟರ್ ಸ್ಥಾಪಿಸಲು ಟೆಂಡರ್ ಆಹ್ವಾನಿಸುವ ಪ್ರಯತ್ನವನ್ನು 2017ರಿಂದಲೇ ನಡೆದಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಟೆಂಡರ್ ಅಂತಿಮಗೊಳಿಸಲು ಆಗಿಲ್ಲ’ ಎಂದು ಸರ್ಕಾರ ಮಾಹಿತಿ ನೀಡಿದೆ.
‘ಕೆಟಿಪಿಪಿ ಕಾಯ್ದೆ ಅಡಿಯಲ್ಲಿ ವಿನಾಯಿತಿ ಪಡೆಯುವುಂತೆ ಪೀಠ ಹೇಳುವುದಿಲ್ಲ. ಪ್ರಕ್ರಿಯೆ ವಿಳಂಬವಾಗದಂತೆ ಮೇಲ್ವಿಚಾರಣೆ ಮಾಡಲಿದೆ. ಪ್ರಗತಿ ಕುರಿತು ಸೆ.30ರೊಳಗೆ ವರದಿ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.