ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಲ್‌.ಕೃಷ್ಣಮೂರ್ತಿಗೆ ವೈದ್ಯಕೀಯ ಚಿಕಿತ್ಸೆಗೆ ಹೈಕೋರ್ಟ್‌ ಅಸ್ತು

Published 8 ಜುಲೈ 2024, 19:43 IST
Last Updated 8 ಜುಲೈ 2024, 19:43 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಮಾಹಿತಿ ಹಕ್ಕು ಆಯೋಗದ ನಿವೃತ್ತ ಮಾಹಿತಿ ಆಯುಕ್ತ ಎಲ್‌.ಕೃಷ್ಣಮೂರ್ತಿ ಅವರಿಗೆ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ಸಿಜಿಎಚ್‌ಎಸ್‌ (ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳನ್ನು ಒದಗಿಸುವ) ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಲು ಹೈಕೋರ್ಟ್‌ ಅವಕಾಶ ಕಲ್ಪಿಸಿದೆ.

‘ಕೃಷ್ಣಮೂರ್ತಿ ಅವರಿಗೆ ಸಿಜಿಎಚ್‌ಎಸ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕು’ ಎಂಬ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ತಳ್ಳಿ ಹಾಕಿದೆ.

ಪ್ರಕರಣವೇನು?: ಎಲ್‌.ಕೃಷ್ಣಮೂರ್ತಿ 2019ರ ಅಕ್ಟೋಬರ್ 25ರಂದು ನಿವೃತ್ತರಾಗಿದ್ದರು. ನಂತರ ಅವರು ವೈದ್ಯಕೀಯ ಪ್ರಯೋಜನ ಕೋರಿ ಸರ್ಕಾರಕ್ಕೆ ಹಲವು ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ, ಅವರ ಅರ್ಜಿಗಳನ್ನು ತಿರಸ್ಕರಿಸಿದ್ದ ಅಧಿಕಾರಿಗಳು, ‘2019ರ ಅಕ್ಟೋಬರ್ 24ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ ವೈದ್ಯಕೀಯ ಭತ್ಯೆ ನೀಡಲಾಗದು’ ಎಂದು ಆದೇಶಿಸಿದ್ದರು.

ಈ ಆದೇಶವನ್ನು ಪ್ರಶ್ನಿಸಿ ಕೃಷ್ಣಮೂರ್ತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಏಕಸದಸ್ಯ ನ್ಯಾಯಪೀಠ, ‘ಅರ್ಜಿದಾರರು ವೈದ್ಯಕೀಯ ಚಿಕಿತ್ಸೆಗೆ ಅರ್ಹರಾಗಿದ್ದಾರೆ’ ಎಂದು 2023ರ ಜೂನ್ 21ರಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT