ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯತ್ನಾಳ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ

Published 19 ಏಪ್ರಿಲ್ 2024, 15:30 IST
Last Updated 19 ಏಪ್ರಿಲ್ 2024, 15:30 IST
ಅಕ್ಷರ ಗಾತ್ರ

ಬೆಂಗಳೂರು: ‘ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ’ ಎಂಬ ಹೇಳಿಕೆ ನೀಡಿದ್ದ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಎರಡು ಪ್ರತ್ಯೇಕ ಎಫ್‌ಐಆರ್‌ ಮತ್ತು ಅವುಗಳಿಗೆ ಸಂಬಂಧಿಸಿದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

"ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸಬೇಕು" ಎಂದು ಕೋರಿ ಯತ್ನಾಳ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ, "ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ"ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಶುಕ್ರವಾರ ಈ ಮಧ್ಯಂತರ ಆದೇಶ ನೀಡಿದ್ದಾರೆ.

ವಿಚಾರಣೆ ವೇಳೆ ಯತ್ನಾಳ್ ಪರ ವಕೀಲ ವೆಂಕಟೇಶ ಪಿ. ದಳವಾಯಿ, "ಅರ್ಜಿದಾರರು ಸಚಿವರ ಪತ್ನಿ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿದ್ದಾರೆಯೇ ಹೊರತು ಅವರ ಪತ್ನಿಗೆ ಪಾಕಿಸ್ತಾನದವರು ಎಂದಿಲ್ಲ. ಯತ್ನಾಳ್‌ ಅವರು ತನ್ನನ್ನು ಪಾಕಿಸ್ತಾನದ ಉಗ್ರಗಾಮಿಗಳಿಗೆ ಹೋಲಿಸಿರುವುದಾಗಿ ಟಬುರಾವ್‌ ಹೇಳಿರುವುದು ಕೇವಲ ಊಹೆ" ಎಂದು ನ್ಯಾಯಪೀಠಕ್ಕೆ ವಿವರಿಸಿದರು.

"ಅರ್ಜಿದಾರರ ಹೇಳಿಕೆಯಿಂದ ನನ್ನ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಟಬು ರಾವ್‌ ಆರೋಪಿಸಿದ್ದಾರೆ. ಆದರೆ, ಪಾಕಿಸ್ತಾನ ಒಂದು ದೇಶವೇ ಹೊರತು, ಧರ್ಮವಲ್ಲ. ಅರ್ಜಿದಾರರು ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವ ರೀತಿಯಲ್ಲಿ ನಡೆದುಕೊಂಡಿಲ್ಲ. ಹಾಗಾಗಿ, ಅವರ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಬೇಕು" ಎಂದು ಕೋರಿದರು.

ವಾದ ಆಲಿಸಿದ ನ್ಯಾಯಮೂರ್ತಿಗಳು, ಎಫ್ಐಆರ್ ಗೆ ತಡೆ ನೀಡಿದರು. ಪ್ರತಿವಾದಿಗಳಾದ ವಿಜಯಪುರ ಗಾಂಧಿ ಚೌಕ ಠಾಣೆಯ ಪೊಲೀಸರು, ದೂರುದಾರಾದ ಸಚಿವ ದಿನೇಶ್‌ ಗುಂಡೂರಾವ್‌ ಪತ್ನಿ ಟಬು ರಾವ್‌ ಮತ್ತು ಚುನಾವಣಾ ಸಂಚಾರಿ ವಿಚಕ್ಷಣಾ ಅಧಿಕಾರಿ ಎಸ್‌.ಬಿ.ಜಿಡ್ಡಿಮನಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದರು.

ಪ್ರಕರಣವೇನು ?

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿದ್ದಕ್ಕೆ ಯತ್ನಾಳ್ ವಿಜಯಪುರದಲ್ಲಿ ಇದೇ 6ರಂದು ಸುದ್ದಿಗಾರರ ಜತೆ ಮಾತನಾಡಿ ಪ್ರತಿಕ್ರಿಯೆ ನೀಡಿದ್ದರು.

ಈ ಸಂದರ್ಭದಲ್ಲಿ ಅವರು, "ಸಚಿವ ದಿನೇಶ್ ಗುಂಡೂರಾವ್ ಗೆ ದೇಶ ವಿರೋಧಿ ಹೇಳಿಕೆ ಕೊಡುವುದು ಚಟವಾಗಿದೆ‌. ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ" ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT