ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಟಿಗೆ ಶೇ 7.5 ಮೀಸಲಾತಿ: ಶೀಘ್ರ ತೀರ್ಮಾನ

ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ
Last Updated 22 ಅಕ್ಟೋಬರ್ 2020, 3:03 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಶೇ 3ರಿಂದ 7.5ಕ್ಕೆ ಹೆಚ್ಚಿಸುವುದು ಮತ್ತು ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಮೀಸಲಾತಿ ಹೆಚ್ಚಳ ಮತ್ತು ಪ್ರತ್ಯೇಕ ಸಚಿವಾಲಯ ಆಗ್ರಹಿಸಿ ಸಮುದಾಯುದ ‍ಸಂಘಟನೆಗಳ ಜೊತೆ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಕುಳಿತ ಸ್ವಾಮೀಜಿ ಅವರನ್ನು ಬಸವರಾಜ ಬೊಮ್ಮಾಯಿ ಮತ್ತು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕರಾದ ರಾಜುಗೌಡ, ರೇಣುಕಾಚಾರ್ಯ ಅವರು ಭೇಟಿ ನೀಡಿ ಮನವೊಲಿಸಲು ಪ್ರಯತ್ನಿಸಿದರು. ಆದರೆ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಹೊರತು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ವಾಮೀಜಿ ಪಟ್ಟು ಹಿಡಿದರು.

‘ಸಮುದಾಯದ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಕೆಲವೇ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಧರಣಿ ಕೈಬಿಡಬೇಕು’ ಎಂದು ಎಂದು ಬೊಮ್ಮಾಯಿ ಮನವಿ ಮಾಡಿದರು. ಅದಕ್ಕೆ ಸ್ವಾಮೀಜಿ ಸಮ್ಮತಿಸಲಿಲ್ಲ.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸ್ವಾಮೀಜಿ, ‘ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪ‍್ರಮಾಣವನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸುವಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ನೀಡಿದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಬೇಕು’ ಎಂದು ಆಗ್ರಹಿಸಿದರು.

‘ಮೀಸಲಾತಿ ಪ್ರಮಾಣ ಹೆಚ್ಚಿಸದೇ ಇರುವುದರಿಂದ ಹಲವು ವರ್ಷಗಳಿಂದ ಸಮುದಾಯದ ವಿದ್ಯಾರ್ಥಿಗಳು ಮತ್ತು ಯುವ ಜನರು ಶಿಕ್ಷಣ ಮತ್ತು ಉದ್ಯೋಗ ಸೌಲಭ್ಯದಿಂದ ವಂಚಿತರಾಗಿದ್ದಾರೆ’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT