ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮನೆ ಬಾಗಿಲಿಗೆ ತೋಟಗಾರಿಕಾ ಉತ್ಪನ್ನ ತಲುಪಿಸಿ’

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಆಗ್ರಹ
Last Updated 4 ಮಾರ್ಚ್ 2022, 15:08 IST
ಅಕ್ಷರ ಗಾತ್ರ

ಬೆಂಗಳೂರು: ‘ಹಾಪ್‌ಕಾಮ್ಸ್‌ಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ,ಬಲವರ್ಧಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಗ್ರಾಹಕರ ಮನೆ ಬಾಗಿಲಿಗೆ ತೋಟಗಾರಿಕಾ ಉತ್ಪನ್ನಗಳನ್ನು ತಲುಪಿಸುವ ವ್ಯವಸ್ಥೆಯನ್ನೂ ರೂಪಿಸಬೇಕು’ ಎಂದುಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳವು ಜಂಟಿಯಾಗಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ‘ತೋಟಗಾರಿಕಾ ಸಹಕಾರ ಸಂಘಗಳು ಮತ್ತು ಹಾಪ್‌ಕಾಮ್ಸ್‌ಗಳು ರೈತರ ಜೀವನಾಡಿಗಳು. ಇಂದಿನ ಸ್ಪರ್ಧಾತ್ಮಕ ಪರಿಸರದಲ್ಲಿ ಖಾಸಗಿ ಮಾಲ್‌ಗಳ ನಡುವೆ ಹಾಪ್‌ಕಾಮ್ಸ್‌ಗಳು ಗ್ರಾಹಕರನ್ನು ತಲುಪಬೇಕಾಗಿದೆ. ಹೀಗಾಗಿ, ಸರ್ಕಾರವು ಪೂರಕ ಕ್ರಮಗಳನ್ನು ಕೈಗೊಳ್ಳಬೇಕು. ರೈತರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವೂ ಆಗಬೇಕು’ ಎಂದು ಹೇಳಿದರು.

‘ಇತ್ತೀಚೆಗೆ ವಿದ್ಯಾವಂತ ಯುವಕರು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಂತಹ ವಲಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸ್ವಾವಲಂಬಿ ಜೀವನ ಸಾಕಾರವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಈ ಕ್ಷೇತ್ರಗಳಿಗೆ ಬರುವಂತಾಗಬೇಕು. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಬೆಲೆ ಸಿಗಬೇಕು’ ಎಂದರು.

ಕರ್ನಾಟಕ ರಾಜ್ಯ ಸಹಕಾರಿತೋಟಗಾರಿಕಾ ಮಾರಟ ಮಹಾಮಂಡಳದ ಉಪಾಧ್ಯಕ್ಷ ಸೂರ್ಯಕುಮಾರ್, ‘ಹಾಪ್‌ಕಾಮ್ಸ್‌ಗಳು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಸರ್ಕಾರವು ಹಾಪ್‌ಕಾಮ್ಸ್‌ಗಳ ನೆರವಿಗೆ ಧಾವಿಸಬೇಕು. ಸ್ವಂತ ಕಟ್ಟಡ ಹೊಂದಲು ಹಣಕಾಸಿನ ಸೌಲಭ್ಯ ನೀಡಬೇಕು’ ಎಂದು ಮನವಿ ಮಾಡಿಕೊಂಡರು.

ಸಹಕಾರ ಮಹಾಮಂಡಳದ ನಿರ್ದೇಶಕರಾದ ಎ.ಸಿ. ನಾಗರಾಜ್, ಕೆ.ಸಿ. ನಾಗರತ್ನಾ, ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್. ಅರುಣ್‌ಕುಮಾರ್, ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕಾ ಮಾರಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕಿ ಎಚ್.ಎನ್. ಹೇಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT