ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಂದ ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕ್ರಮ: ಜಗದೀಶ ಶೆಟ್ಟರ್ ಎಚ್ಚರಿಕೆ

ಕೈಗಾರಿಕಾ ಸಚಿವ
Last Updated 4 ಜನವರಿ 2020, 20:05 IST
ಅಕ್ಷರ ಗಾತ್ರ

ಬೆಂಗಳೂರು: ‘ಪರಿಹಾರಧನ ನೀಡಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಎಚ್ಚರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಹರಲೂರು ಮುದ್ದೇನಹಳ್ಳಿಯ ರಕ್ಷಣಾ, ಏರೋಸ್ಪೇಸ್‌ ಹೈಟೆಕ್‌ ಇಂಡಸ್ಟ್ರಿ ಲೇಔಟ್‌ ಕೈಗಾರಿಕಾ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದರು.

‘ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ಹಲವಾರು ರೈತರಿಂದ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇಂತಹ ರೈತರಿಗೆ ಪರಿಹಾರ ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ಪರಿಹಾರ ಬಿಡುಗಡೆಗೆ ಅಧಿಕಾರಿಗಳು ಲಂಚಕ್ಕೆ ಕೈಚಾಚಿದರೆ ಅಂತಹ ಅಧಿಕಾರಿಗಳ ವಿರುದ್ಧ ದೂರು ನೀಡಿ. ತಕ್ಷಣವೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ತಾಲ್ಲೂಕಿನ ಹರಳೂರು, ಪೋಲನಹಳ್ಳಿ, ಮುದ್ದೇನಹಳ್ಳಿ ಸೇರಿದಂತೆ ಹಲವು ಕಡೆ ಭೇಟಿ ನೀಡಿದ ಸಚಿವರು, ರೈತರೊಂದಿಗೆ ಮಾತುಕತೆ ನಡೆಸಿದರು. ಪರಿಹಾರ ವಿತರಣೆಯಲ್ಲಿ ಲೋಪವಾಗುತ್ತಿದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆದರು.

ನೂತನ ಕೈಗಾರಿಕಾ ಪ್ರದೇಶಕ್ಕೆಂದು ಸರ್ಕಾರ 1,800 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿದೆ. ಇಲ್ಲಿ ಹಲವು ಬಗೆಯ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದರು.

‘ಕೈಗಾರಿಕಾ ಪ್ರದೇಶಗಳು ಅಭಿವೃದ್ಧಿ ಹೊಂದಿದರೆ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಇಲ್ಲಿ ರೈತರ ಮಕ್ಕಳಿಗೆ ಉದ್ಯೋಗ ಲಭಿಸುತ್ತದೆ. ಕೈಗಾರಿಕೆಗೆಂದು ಭೂಮಿ ಕೊಟ್ಟಿರುವ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಸೂಚಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT