ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಪರಿಹಾರ ವಿತರಣೆ: ವಂಚಿಸಿದರೆ ಅಮಾನತು

ಅಧಿಕಾರಿಗಳಿಗೆ ಬಿಡಿಎ ಅಧ್ಯಕ್ಷ ಎಚ್ಚರಿಕೆ
Last Updated 30 ನವೆಂಬರ್ 2020, 22:59 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬಡಾವಣೆಗಳ ಅಭಿವೃದ್ಧಿಗಾಗಿ ಸ್ವಾಧೀನ ಪಡಿಸಿಕೊಳ್ಳುವ ಜಮೀನುಗಳಿಗೆ ಪರಿಹಾರ ವಿತರಣೆ ಪ್ರಕ್ರಿಯೆ ವೇಳೆ ವಂಚನೆ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇದರಲ್ಲಿ ಭಾಗಿಯಾಗುವ ಅಧಿಕಾರಿಗಳನ್ನು ಮುಲಾಜಿಲ್ಲದೇ ಅಮಾನತು ಮಾಡಿ, ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್ ಎಚ್ಚರಿಕೆ ನೀಡಿದರು.

’ಬಿಡಿಎ ಹಿರಿಯ ಅಧಿಕಾರಿಗಳ ಜೊತೆ ಅವರು ಸೋಮವಾರ ಸಭೆ ನಡೆಸಿದರು. ಬದಲಿ ನಿವೇಶನಗಳು, ಖಾಲಿ ಇರುವ ನಿವೇಶನಗಳು ಮತ್ತು ಬಿಡಿಎ ಆಸ್ತಿಯ ವಿವರಗಳನ್ನು ಮುಚ್ಚಿಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ. ಬಿಡಿಎ ಬಡಾವಣೆಗಳಲ್ಲಿ ಅಕ್ರಮವಾಗಿ ಮನೆ ಅಥವಾ ಬಡಾವಣೆ ನಿರ್ಮಾಣಕ್ಕೆ ಕೆಲವು ಅಧಿಕಾರಿಗಳೇ ಅವಕಾಶ ಮಾಡಿಕೊಡುತ್ತಿದ್ದಾರೆ. ಇವುಗಳನ್ನು ನೋಂದಣಿಯೂ ಮಾಡಿಕೊಡುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಶಿಕ್ಷೆಗೆ ಗುರಿಪಡಿಸುತ್ತೇವೆ’ ಎಂದರು.

‘ಯಾವುದೇ ಕಾರಣಕ್ಕೂ ಬಿಡಿಎ ಉನ್ನತಾಧಿಕಾರಿಗಳ ಅನುಮತಿ ಪಡೆಯದೇ ಬದಲಿ ನಿವೇಶನಗಳನ್ನು ಮಂಜೂರು ಮಾಡಬಾರದು’ ಎಂದು ಸ್ಪಷ್ಟ ಸೂಚನೆ ನೀಡಿದರು.

ಬಿಡಿಎ ನಿರ್ಮಾಣ ಮಾಡಿರುವ ಮತ್ತು ನಿರ್ಮಾಣದ ಹಂತದಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯಗಳಿಗೆ ಮೂಲ ಸೌಕರ್ಯ ಒದಗಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಡಾವಣೆಗಳಿಗೆ ಭೂಮಿ ಬಿಟ್ಟುಕೊಟ್ಟು, ಒಮ್ಮೆ ಪರಿಹಾರ ಪಡೆದಿರುವ ಕೆಲವರು ಅದೇ ದಾಖಲೆ ಆಧಾರದಲ್ಲಿ ಮತ್ತೊಮ್ಮೆ ಪರಿಹಾರ ತೆಗೆದುಕೊಂಡು ವಂಚನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ವಿಶ್ವನಾಥ್ ಹೇಳಿದರು.

ಬಿಡಿಎ ಆಯುಕ್ತ ಎಚ್.ಆರ್.ಮಹದೇವ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT