ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಮಗಾರಿಗಳಿಗೆ ₹500 ಕೋಟಿ ಬಿಲ್ ಪಾವತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಪರಿಶೀಲಿಸಲು ಬಿಬಿಎಂಪಿ ಐವರು ಅಧಿಕಾರಿಗಳ ಸಮಿತಿ ರಚಿಸಿದೆ.
‘2020ರ ಸೆಪ್ಟೆಂಬರ್ 18ರಿಂದ 2022ರ ಜುಲೈ 19ರವರೆಗೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಮಗಾರಿಗಳಿಗೆ ಬಿಲ್ ಬಿಡುಗಡೆಯಲ್ಲಿ ಅಕ್ರಮವಾಗಿದೆ ಎಂಬ ದೂರುಗಳು ಬಂದಿದ್ದವು. ಆದ್ದರಿಂದ ಈ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸುದ್ದಿಗಾರರಿಗೆ ಬುಧವಾರ ತಿಳಿಸಿದರು.
‘ಕಾಮಗಾರಿಗಳ ಬಗ್ಗೆ ಈಗಾಗಲೇ ಹಲವು ತನಿಖೆಗಳು ನಡೆಯುತ್ತಿವೆ. ಅದೇ ಕಾಮಗಾರಿಗಳಿಗೆ ಹಣ ಬಿಡುಗಡೆಯಲ್ಲೂ ಅಕ್ರಮವಾಗಿದೆಯೇ ಎಂಬುದನ್ನು ಅರಿತುಕೊಳ್ಳಲು ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದರು.
ಸಮಿತಿ: ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅಧ್ಯಕ್ಷತೆಯ ಸಮಿತಿಯಲ್ಲಿ ಯೋಜನೆ ಹಾಗೂ ಹಣಕಾಸು ವಿಭಾಗದ ವಿಶೇಷ ಆಯುಕ್ತರು, ಗುಣ ಭರವಸೆ ಮತ್ತು ಗುಣ ನಿಯಂತ್ರಣ ವಿಭಾಗದ ಮುಖ್ಯ ಎಂಜಿನಿಯರ್ ಸದಸ್ಯರಾಗಿದ್ದಾರೆ. ಟಿವಿಸಿಸಿ ಮುಖ್ಯ ಎಂಜಿನಿಯರ್ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.