ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೃತೀಯ ಹಂತದ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆ ಸೌಕರ್ಯ ಹೆಚ್ಚಳ: ತಜ್ಞರ ಸಮಿತಿ

Last Updated 14 ಜುಲೈ 2021, 7:44 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಸೋಂಕಿಗೆ ಒಳಗಾಗುವ ಸಾಧ್ಯತೆ ಇರುವುದರಿಂದ ನಗರದ ತೃತೀಯ ಹಂತದ ಆಸ್ಪತ್ರೆಗಳಲ್ಲೂ ಮಕ್ಕಳ ಚಿಕಿತ್ಸೆಯ ಮೂಲಸೌಕರ್ಯ ಹೆಚ್ಚಿಸಬೇಕು ಎಂದು ಬಿಬಿಎಂಪಿ ನೇಮಿಸಿರುವ ತಜ್ಞರ ಸಮಿತಿ ಸಲಹೆ ನೀಡಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮಕ್ಕಳ ತಜ್ಞರ ಸಮಿತಿಯ ಕೆಲವು ಸಲಹೆಗಳ ಆಧಾರದಲ್ಲಿ ನಗರದ ವೈದ್ಯಕೀಯ ಕಾಲೇಜುಗಳು ಹಾಗೂ ಇತರ ತೃತೀಯ ಹಂತದ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮಕೈಗೊಂಡಿದ್ದೇವೆ’ ಎಂದರು.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ದಕ್ಷಿಣ ವಲಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚು ಇದೆ. ಹೆಚ್ಚು ಪ್ರಕರಣಗಳು ಕಂಡುಬಂದ ಕಡೆ ಕಂಟೈನ್ಮೆಂಟ್‌ ಪ್ರದೇಶಗಳನ್ನು ಗುರುತಿಸಿ ನಿಯಂತ್ರಿಸಿದ್ದರಿಂದ ಮಹದೇವಪುರ ವಲಯದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಮನೆ ಮನೆಗೆ ಭೇಟಿ ನೀಡಿ ವಿವರ ಕಲೆ ಹಾಕುವ ಹಾಗೂ ಕಂಟೈನ್ಮೆಂಟ್‌ ಗುರುತಿಸುವ ಪ್ರಕ್ರಿಯೆ ಈಗಲೂ ಮುಂದುವರಿದಿದೆ’ ಎಂದು ತಿಳಿಸಿದರು.

‘ಲಾಕ್‌ಡೌನ್‌ ಸಂಪೂರ್ಣ ತೆರವುಗೊಳಿಸಬೇಕು, ಜನಜೀವನ ಸಹಜ ಸ್ಥಿತಿಗೆ ಬರಬೇಕು ಎಂಬ ಅಪೇಕ್ಷೆ ಜನರಲ್ಲಿ ಇರುವುದು ಸಹಜ. ಆದರೆ, ನಮ್ಮ ಅಕ್ಕ ಪಕ್ಕದ ರಾಜ್ಯಗಳಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚುತ್ತಿರುವುದರಿಂದ ನಾವೂ ಜಾಗರೂಕರಾಗಿರಬೇಕಾಗುತ್ತದೆ’ ಎಂದರು.

‘ಮಳೆಗಾಲದಲ್ಲಿ ಅನಾಹುತ ತಡೆಯಲು ಸಿದ್ಧತೆ ಮಾಡಿಕೊಂಡಿದ್ದೇವೆ. ನಗರದಲ್ಲಿ ದಿನದಲ್ಲಿ 50 ಮಿ.ಮೀಟರ್‌ವರೆಗೆ ಮಳೆ ಬಿದ್ದರೆ ಸಮಸ್ಯೆ ಆಗದು. ಅದಕ್ಕಿಂತ ಹೆಚ್ಚು ಮಳೆಯಾದಾಗ ಮಾತ್ರ ಸಮಸ್ಯೆ ಆಗುವ ಸಾಧ್ಯತೆ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT