ಮಂಗಳವಾರ, ಸೆಪ್ಟೆಂಬರ್ 29, 2020
22 °C
500 ಜನರಿಗೆ ಮಾತ್ರ ಪ್ರವೇಶ; ಮಾಸ್ಕ್ ಕಡ್ಡಾಯ

ಸ್ವಾತಂತ್ರ್ಯೋತ್ಸವ ಸರಳ ಆಚರಣೆಗೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯ ಮಟ್ಟದ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸರಳವಾಗಿ ಆಚರಣೆ ಮಾಡಲು ಬಿಬಿಎಂಪಿ, ನಗರ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿವೆ.

‘ಕೋವಿಡ್ ಕಾರಣದಿಂದ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. 75 ಮಂದಿ ಕೊರೋನಾ ಯೋಧರು ಹಾಗೂ ಕೋವಿಡ್‌ನಿಂದ ಗುಣಮುಖರಾದ 25 ಮಂದಿಯನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ‌. ಜನಪ್ರತಿನಿಧಿಗಳು, ಅಧಿಕಾರಿಗಳು, ರಕ್ಷಣಾ ಇಲಾಖೆ ಅಧಿಕಾರಿಗಳು ಸೇರಿ 500 ಜನರಿಗೆ ಮಾತ್ರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಮುಖಗವಸು ಧರಿಸುವುದು ಕಡ್ಡಾಯ. ಅಂತರ ಕಾಯ್ದುಕೊಂಡು ಕೂರಲು ವ್ಯವಸ್ಥೆ ಮಾಡಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಅಂದು ಬೆಳಿಗ್ಗೆ 8.58ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೈದಾನಕ್ಕೆ ಬರಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸುವರು. ಗೌರವ ವಂದನೆ ಸ್ವೀಕರಿಸಿ ನಾಡಿನ ಜನರಿಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ. ದೂರದರ್ಶನ ಮತ್ತು ವೆಬ್‌ ಕಾಸ್ಟಿಂಗ್‌ ಮೂಲಕ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ’ ಎಂದು ಹೇಳಿದರು.

ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾತನಾಡಿ, ‘ಕೋವಿಡ್ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೆಎಸ್ಆರ್‌ಪಿ, ಮಹಿಳಾ ಪೊಲೀಸ್, ಬಿಎಸ್‌ಎಫ್‌ ಸೇರಿ 16 ತುಕಡಿಗಳು, 4 ಬ್ಯಾಂಡ್ ಸೇರಿ 20 ತಂಡಗಳು ಕವಾಯುತು ನಡೆಸಲಿದ್ದು, ದಕ್ಷಿಣ ವಲಯದ ಡಿಸಿಪಿ ಗಿರೀಶ್ ಉಸ್ತುವಾರಿ ವಹಿಸಲಿದ್ದಾರೆ’ ಎಂದು ವಿವರಿಸಿದರು.

ಅಂದು ಬೆಳಿಗ್ಗೆ 8.30ರಿಂದ 10.30ರವರೆಗೆ ಕಬ್ಬನ್ ರಸ್ತೆಯಲ್ಲಿ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ ತನಕ ಎರಡೂ ಬದಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸಬಹುದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು