ಒಳರೋಗಿಗಳು ಬೇರೆಡೆಗೆ ಸ್ಥಳಾಂತರ: ಚಿಕಿತ್ಸೆಗೆ ಸಜ್ಜಾಗುತ್ತಿದೆ ವಿಕ್ಟೋರಿಯಾ

ಬೆಂಗಳೂರು: ಕೊರೊನಾ ಸೋಂಕಿತರು ಹಾಗೂ ಸೋಂಕು ಶಂಕಿತರಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆ ಸಜ್ಜುಗೊಳ್ಳುತ್ತಿದ್ದು, ಅಲ್ಲಿನ ಒಳರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ.
ಕೋವಿಡ್–19 ರೋಗಿಗಳು ಹಾಗೂ ಸೂಂಕು ಶಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್–19 ಕಾರ್ಯಪಡೆಯು ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡುವಂತೆ ಸೂಚಿಸಿತ್ತು. ಸದ್ಯ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆ, ಜಯನಗರದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ನಿರ್ಮಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ರೀತಿ ವಿವಿಧ ಆಸ್ಪತ್ರೆಗಳಲ್ಲಿ ಅವರನ್ನು ದಾಖಲಿಸಿಕೊಂಡಲ್ಲಿ ಚಿಕಿತ್ಸೆಗೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಹಾಗಾಗಿ ಸೋಂಕು ನಿಗ್ರಹ ಮಾಡುವ ನಿಟ್ಟಿನಲ್ಲಿ 1,700 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ವಿಕ್ಟೋರಿಯಾ ಆಸ್ಪತ್ರೆಯನ್ನು ಕೋವಿಡ್–19 ರೋಗಿಗಳಿಗಾಗಿಯೇ ವಿಶೇಷ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುತ್ತಿದೆ.
ವಿಕ್ಟೋರಿಯಾದಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಕೆ.ಸಿ.ಜನರಲ್, ಜಯನಗರ ಸಾರ್ವಜನಿಕ ಆಸ್ಪತ್ರೆ, ಕಿಮ್ಸ್ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ. ಆಸ್ಪತ್ರೆಯ ವೈದ್ಯರಿಗೂ ಚಿಕಿತ್ಸೆಗೆ ಸನ್ನದವಾಗಿರುವಂತೆ ಸೂಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ, ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರಸ್ತುತ ಆಸ್ಪತ್ರೆಯಲ್ಲಿ ಮೂರು ತುರ್ತುನಿಗಾ ಘಟಕಗಳಿವೆ. ಸದ್ಯ 100 ವೆಂಟಿಲೇಟರ್‌ಗಳಿದ್ದು, ಇದರ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುತ್ತಿದೆ.
‘ಒಳರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಕೋವಿಡ್–19 ರೋಗಕ್ಕೆ ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಚಿಕಿತ್ಸೆಗೆ ಸಿದ್ಧವಾಗಿರಬೇಕು ಎಂದು ಸೂಚಿಸಲಾಗಿದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದರು.
ಚಿಕಿತ್ಸೆಗೆ ಬರುವವರಲ್ಲಿ ಆತಂಕ: ವಿಕ್ಟೋರಿಯಾ ಆವರಣದಲ್ಲಿ ವಾಣಿವಿಲಾಸ ಆಸ್ಪತ್ರೆ, ಎಮರ್ಜೆನ್ಸಿ ಟ್ರಾಮಾ ಸೆಂಟರ್, ನೆಫ್ರೋ ಯುರಾಲಜಿ ಸಂಸ್ಥೆ, ಮಿಂಟೊ ಆಸ್ಪತ್ರೆ ಸೇವೆ ನೀಡುತ್ತಿವೆ. ಈ ಆಸ್ಪತ್ರೆಗಳಿಗೆ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. ವಿಕ್ಟೋರಿಯಾಕ್ಕೆ ಹೊಂದಿಕೊಂಡೇ ಇರುವುದರಿಂದ ಅಲ್ಲಿಗೆ ಬರುವವರಿಗೆ ಸುರಕ್ಷತೆಯ ಭೀತಿ ಕಾಡುವ ಸಾಧ್ಯತೆ ಇದೆ.
ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕೆಂದು ವಿವಿಧ ಆಸ್ಪತ್ರೆಗಳ ನಿರ್ದೇಶಕರು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ
ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಡೀನ್ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಡೀನ್ ಡಾ.ಜಯಂತಿ ಪ್ರತಿಕ್ರಿಯೆಗೆ
ಲಭ್ಯರಾಗಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.