ಬೆಂಗಳೂರು: ರಾಜ್ಯದ ಕೇಂದ್ರ, ಜಿಲ್ಲಾ ಹಾಗೂ ತಾಲ್ಲೂಕು ಕಾರಾಗೃಹಗಳಲ್ಲಿನ ವ್ಯವಸ್ಥೆ ಮತ್ತು ಸೌಲಭ್ಯಗಳ ಕುರಿತು ನವೆಂಬರ್ 22ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
‘ಕಾರಾಗೃಹಗಳಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವ ದಿಸೆಯಲ್ಲಿ ಜುಲೈ 4ರಂದು ನೀಡಿರುವ ಆದೇಶದ ಅನುಪಾಲನಾ ವರದಿಯನ್ನು ನವೆಂಬರ್ 22ರೊಳಗೆ ಸಲ್ಲಿಸಬೇಕು’ ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದೆ.