ಜಯದೇವ ಆಸ್ಪತ್ರೆ ವೈದ್ಯರಿಗೂ ಕೊರೊನಾ ಸೋಂಕು

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ 32 ವರ್ಷದ ವೈದ್ಯರೊಬ್ಬರಿಗೆ ಕೊರೊನ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ಅವರ ಜೊತೆ ನೇರ ಸಂಪರ್ಕ ಹೊಂದಿದ್ದ ಎಂಟು ವೈದ್ಯರು, 15 ಶುಶ್ರೂಷಕರು ಹಾಗೂ ಇಬ್ಬರು ಸಹಾಯಕ ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.
‘ಸೋಂಕು ದೃಢಪಟ್ಟ ವೈದ್ಯರು ಹೊರರೋಗಿಗಳ ವಿಭಾಗದಲ್ಲಿ (ಒಪಿಡಿ) ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಇತ್ತೀಚೆಗೆ ಶೀತ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ಅವರು ಗಂಟಲ ದ್ರವವನ್ನು ಪರೀಕ್ಷೆ ಮಾಡಿಸಿಕೊಂಡಿದ್ದರು. ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ಆ ವೈದ್ಯರು ಜೂನ್ 15ರಿಂದ ಕರ್ತವ್ಯಕ್ಕೆ ಹಾಜರಾಗಿಲ್ಲ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಹೊರರೋಗಿಗಳ ವಿಭಾಗದವನ್ನು ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ. ಅವರ ಜೊತೆ ನೇರ ಸಂಪರ್ಕ ಹೊಂದಿದ್ದ ಸಂಸ್ಥೆಯ ವೈದ್ಯರು ಸೇರಿದಂತೆ 25 ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಆದರೆ, ಸಂಸ್ಥೆಯು ಎಲ್ಲ ಸೇವೆಗಳನ್ನೂ ಮುಂದುವರಿಸಿದೆ. ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿಲ್ಲ. ಸೋಮವಾರವೂ ಸುಮಾರು 800 ಮಂದಿಗೆ ಚಿಕಿತ್ಸೆ ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.