ಸೋಮವಾರ, ಅಕ್ಟೋಬರ್ 25, 2021
24 °C

ಜೆಡಿಎಸ್‌ನ ಹಲವು ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ‘ಭಾರತ ದೇಶದ ಇತಿಹಾಸದಲ್ಲಿ ನರೇಂದ್ರ ಮೋದಿ ಅವರಂತೆ ಸುಳ್ಳುಗಳನ್ನು ಹೇಳಿದ ಪ್ರಧಾನಿಯನ್ನು ಹಿಂದೆಂದೂ ಕಂಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದು, ಬಿಜೆಪಿ ಸರ್ಕಾರ ಸುಳ್ಳು ಉತ್ಪಾದಿಸುವ ಕಾರ್ಖಾನೆಯಾಗಿದೆ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಹೆಬ್ಬಾಳ ಮತ್ತು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ವತಿಯಿಂದ ಡಾಲರ್ಸ್ ಕಾಲೊನಿಯಲ್ಲಿ ಆಯೋಜಿಸಿದ್ದ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮೋದಿಯವರು ಮಾತೆತ್ತಿದರೆ ಅಚ್ಛೇ ದಿನ್ ಆಯೇಗ ಎಂದು ಹೇಳುತ್ತಾರೆ. ಆದರೆ, ಇಂದು ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಏನನ್ನೂ ಕೊಂಡುಕೊಳ್ಳಲು ಆಗದೆ ಜನರು ಬದುಕಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ಇಂದು ಬೆಂಗಳೂರು ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದರೆ, ಇದಕ್ಕೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೀಡಿದ ಅನುದಾನದಿಂದಲೇ ಹೊರತು, ಬಿಜೆಪಿ ಸರ್ಕಾರ ನಯಾಪೈಸೆಯನ್ನೂ ಕೊಟ್ಟಿಲ್ಲ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಬಡವರಿಗೆ ಏಳು ಕೆಜಿಯಲ್ಲ. ಹತ್ತು ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ’ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಶಿಕ್ಷಣ, ಉದ್ಯೋಗ ಸೇರಿದಂತೆ ಯಾವುದೇ ಹೊಸ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ದೇಶದಲ್ಲಿ ರೈತರು ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸದೆ ಬಂಡವಾಳಶಾಹಿಗಳ ಪರವಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ರೈತರ ಹೋರಾಟಗಳಿಗೆ ಕಾಂಗ್ರೆಸ್ ಎಂದಿಗೂ ಜೊತೆಯಗಿ ನಿಲ್ಲಲಿದೆ ಎಂದು ಘೋಷಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕರಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್ ಮಾತನಾಡಿದರು.

ಸೇರ್ಪಡೆ: 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗಳಾಗಿ ಸ್ಫರ್ಧಿಸಿದ್ದ ಎಂ.ಹನುಮಂತೇಗೌಡ, ಟಿ.ಜಿ.ಚಂದ್ರು, ಮಾಜಿ ಉಪಮೇಯರ್ ಎಂ.ಆನಂದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಟಿ.ಕೆ.ಗೋಪಾಲಯ್ಯ ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿಯನ್ನು ತೊರೆದು 100ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್‌ ಮುಖಂಡ ಎಂ.ಆರ್.ಸೀತಾರಾಂ, ರವಿ, ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪುಷ್ಪಾ ಅಮರನಾಥ್, ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ, ಬಿಬಿಎಂಪಿ ಮಾಜಿ ಸದಸ್ಯರಾದ ಅಬ್ದುಲ್ ವಾಜಿದ್, ಎಂ.ಆನಂದಕುಮಾರ್, ಬೆಂಗಳೂರು ಉತ್ತರಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜಕುಮಾರ್, ಮುಖಂಡರಾದ ಎಂ.ಎನ್.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು