ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕನ್ನಡ ಭಾಷೆ ಕಡೆಗಣನೆ: ಟಿ.ಎಸ್. ನಾಗಾಭರಣ

ಕನ್ನಡ ಭಾಷಾ ಕಲಿಕಾ ಅಧಿನಿಯಮ–2015 ಅನುಷ್ಠಾನಕ್ಕೆ ಟಿ.ಎಸ್. ನಾಗಾಭರಣ ಮನವಿ
Last Updated 20 ಆಗಸ್ಟ್ 2021, 16:45 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು 2015ರ ಕನ್ನಡ ಭಾಷಾ ಕಲಿಕಾ ಕಾಯ್ದೆಯನ್ನು ಉಲ್ಲಂಘಿಸುತ್ತಿರುವ ಬಗ್ಗೆ ನಿರಂತರವಾಗಿ ದೂರುಗಳು ಸಲ್ಲಿಕೆಯಾಗುತ್ತಿವೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ತಿಳಿಸಿದ್ದಾರೆ.

ಈ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ಶುಕ್ರವಾರ ಭೇಟಿ ಮಾಡಿ, ಮನವಿ ಸಲ್ಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಇದ್ದರು.

‘ಕನ್ನಡ ಭಾಷಾ ಕಲಿಕಾ ಕಾಯ್ದೆ–2015ರ ಅನ್ವಯ 2017-18ನೇ ಸಾಲಿನಿಂದ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘದ ಮಾಹಿತಿ ಪ್ರಕಾರ 2021–22ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ 823 ಶಾಲೆಗಳು ಸರ್ಕಾರ ನಿಗದಿಪಡಿಸಿರುವ ಕನ್ನಡ ಪಠ್ಯಪುಸ್ತಕಗಳನ್ನು ಖರೀದಿಸಲು ಅಧಿಕೃತ ಪಟ್ಟಿ ಸಲ್ಲಿಸಿಲ್ಲ’ ಎಂದು ಮನವಿ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

‘ಕನ್ನಡ ಭಾಷಾ ಕಲಿಕಾ ಅಧಿನಿಯಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಲ್ಲಿನ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ನಾಲ್ಕನೇ ತರಗತಿವರೆಗೆ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ತರಗತಿಗಳಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಸಕ್ಷಮ ಪ್ರಾಧಿಕಾರದಿಂದ ಖರೀದಿಸಲಾಗಿದೆಯೇ ಎಂಬ ಬಗ್ಗೆ ದಾಖಲಾತಿಗಳನ್ನು ಸಂಗ್ರಹಿಸಬೇಕು’ ಎಂದು ಹೇಳಿದ್ದಾರೆ.

‘ಕನ್ನಡ ವಿಷಯಕ್ಕೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಹಾಗೂ ಶಿಕ್ಷಕರಿಗೆ ನಿಯಮಾನುಸಾರ ತರಗತಿಗಳನ್ನು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸಬೇಕು. ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಿ, ಅಂಕಪಟ್ಟಿಯನ್ನು ವಿತರಿಸಿರುವ ಬಗ್ಗೆ ಕೂಡ ದಾಖಲೆಗಳನ್ನು ಸಂಗ್ರಹಿಸಬೇಕು. ಈ ಬಗ್ಗೆ 15 ದಿನಗಳೊಳಗೆ ಪ್ರಾಧಿಕಾರಕ್ಕೆ ವಿಸ್ತೃತ ವರದಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು’ ಎಂದು ಉಪ ನಿರ್ದೇಶಕರಿಗೆ ನಾಗಾಭರಣ ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT