ಸೋಮವಾರ, ಮಾರ್ಚ್ 20, 2023
30 °C
ವೈದ್ಯಕೀಯ ಸಂಸ್ಥೆಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ

‘ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ಕಡ್ಡಾಯಗೊಳಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವೈದ್ಯಕೀಯ ಸೇವೆ ಪಡೆಯಲು ಬರುವ ಸಾಮಾನ್ಯ ಕನ್ನಡಿಗರ ನಾಳೆಗಳಿಗಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡದ ಬಳಕೆ ಕಡ್ಡಾಯವಾಗಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಸಂಸ್ಥೆಗಳಿಗೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಿ, ಮನವಿ ಮಾಡಿಕೊಂಡಿದೆ. ರಾಷ್ಟ್ರೀಯ ವೈದ್ಯರ ದಿನದಂದು ಚಾಲನೆ ಸಿಕ್ಕ ಈ ಅಭಿಯಾನ, ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಅಭಿಯಾನದ ಅಂಗವಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌ ಅವರನ್ನು ಭೇಟಿ ಮಾಡಿದ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ‘ವೈದ್ಯಕೀಯ ವಿಶ್ವವಿದ್ಯಾಲಯಗಳು, ವೈದ್ಯಕೀಯ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಪಠ್ಯೇತರ ವಿಷಯವಾಗಿ ಕನ್ನಡವನ್ನು ಬೋಧಿಸಬೇಕು’ ಎಂದು ಮನವಿ ಮಾಡಿಕೊಂಡರು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಕನ್ನಡ ಬೋಧನೆ, ವೈದ್ಯ ಪದಕೋಶಗಳ ಬಳಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅವರು ಚರ್ಚಿಸಿದರು. 

ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಟಿ.ಕೆ. ಅನಿಲ್‌ ಕುಮಾರ್‌, ‘ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ, ಸುತ್ತೋಲೆಗಳನ್ನು ಹೊರಡಿಸಲಾಗುವುದು’ ಎಂದು ತಿಳಿಸಿದರು.

‘ಕೋವಿಡ್ ಸಂಕಷ್ಟದ ನಡುವೆಯೂ ಕನ್ನಡಕ್ಕೆ ಸಂಬಂಧಿಸಿದಂತೆ ಏಳು ಅಭಿಯಾನಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಇನ್ನಷ್ಟು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ. ಪ್ರತಿ ತಿಂಗಳೂ ನೂತನ ಆಲೋಚನೆಗಳೊಂದಿಗೆ ಜನಸಾಮಾನ್ಯರನ್ನು ತಲುಪಲಾಗುವುದು’ ಎಂದು ಪ‍್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು