ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಎಚ್ಚರಿಕೆ
Published 29 ಡಿಸೆಂಬರ್ 2023, 16:44 IST
Last Updated 29 ಡಿಸೆಂಬರ್ 2023, 16:44 IST
ಅಕ್ಷರ ಗಾತ್ರ

ಬೆಂಗಳೂರು: ‘ವಾಣಿಜ್ಯ ಮಳಿಗೆಗಳ ನಾಮ ಫಲಕಗಳಲ್ಲಿ ಕನ್ನಡ ಬಳಕೆಗೆ ಹೋರಾಡಿ ಬಂಧನಕ್ಕೆ ಒಳಗಾಗಿರುವ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆ ಮಾಡದಿದ್ದರೆ ಬೆಂಗಳೂರು ಬಂದ್‌ಗೆ ಕರೆ ನೀಡಲಾಗುವುದು’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. 

ಇಂಗ್ಲಿಷ್ ನಾಮಫಲಕಗಳನ್ನು ಕಿತ್ತು ಬಿಸಾಡಿ, ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಟಿ.ಎ. ನಾರಾಯಣಗೌಡ ಸೇರಿ ಕರ್ನಾಟಕ ರಕ್ಷಣಾ ವೇದಿಕೆಯ 53 ಮಂದಿಯನ್ನು ಬಿಡುಗಡೆಗೆ ಆಗ್ರಹಿಸಿ ಕನ್ನಡಪರ ಹೋರಾಟಗಾರರು ಹಾಗೂ ಸಾಹಿತಿಗಳು ನಗರದಲ್ಲಿ ಶುಕ್ರವಾರ ಸಭೆ ನಡೆಸಿದರು. 

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ, ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಸಾಹಿತಿಗಳಾದ ಹಂ.ಪ. ನಾಗರಾಜಯ್ಯ, ದೊಡ್ಡರಂಗೇಗೌಡ ಸೇರಿ ವಿವಿಧ ಕನ್ನಡ ಪರ ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. 

‘ಅಮಾಯಕ ಕನ್ನಡ ಪರ ಹೋರಾಟಗಾರರು ಹಾಗೂ ನಾಯಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು‘ ಎಂಬ ಎರಡು ನಿರ್ಣಯಗಳನ್ನು ಸಭೆಯಲ್ಲಿ ತೆಗೆದುಕೊಂಡರು. 

ಬಳಿಕ ಮಾತನಾಡಿದ ಪ್ರವೀಣ್ ಶೆಟ್ಟಿ, ‘ಫೆ.28ರೊಳಗೆ ವಾಣಿಜ್ಯ ಮಳಿಗೆಗಳ ನಾಮಫಲಕಗಳು ಕನ್ನಡದಲ್ಲಿ ಇರದಿದ್ದರೆ ಬೆಂಗಳೂರಿನಲ್ಲಿ ಎಲ್ಲ ಕನ್ನಡ ಸಂಘಟನೆಗಳೂ ಮತ್ತೆ ಬೀದಿಗೆ ಇಳಿಯಲಿವೆ. ಸರೋಜನಿ ಮಹಿಷಿ ವರದಿ ಜಾರಿಗೊಳಿಸಿ, ಇಲ್ಲಿನ ಎಲ್ಲ ಕಾರ್ಖಾನೆ, ಐಟಿ-ಬಿಟಿ ಕಂಪನಿಗಳಲ್ಲಿ ಈ ನೆಲದ ಮಕ್ಕಳಿಗೆ ಉದ್ಯೋಗ ಕೊಡಬೇಕು’ ಎಂದು ಆಗ್ರಹಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT