ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಬ್ಲಿಕ್‌ ಶಾಲೆ ರದ್ದತಿಗೆ ಸಾಹಿತಿಗಳು, ಶಿಕ್ಷಣ ತಜ್ಞರು ಆಗ್ರಹ

ಪೂರ್ವ ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಇರಲಿ: ಸಾಹಿತಿಗಳ ಒತ್ತಾಯ
Last Updated 11 ಸೆಪ್ಟೆಂಬರ್ 2019, 19:40 IST
ಅಕ್ಷರ ಗಾತ್ರ

ಬೆಂಗಳೂರು: ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಆಂಗ್ಲ ಮಾಧ್ಯಮದಲ್ಲಿ ನೀಡುವುದರಿಂದ ಶಾಲೆ ತೊರೆಯುವ ಮಕ್ಕಳ ಸಂಖ್ಯೆ ಮುಂದಿನ ದಿನಗಳಲ್ಲಿ ಹೆಚ್ಚಲಿದೆ. ಹಾಗಾಗಿ, ಈಗಾಗಲೇ ಆರಂಭಿಸಿರುವ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್‌) ರದ್ದುಗೊಳಿಸಿ, ಮಾತೃಭಾಷೆಯಲ್ಲೇ ಶಿಕ್ಷಣ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂಬ ಅಭಿಪ್ರಾಯವನ್ನು ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ವ್ಯಕ್ತಪಡಿಸಿದರು.

ಕರ್ನಾಟಕ ವಿಕಾಸರಂಗ ಹಾಗೂ ಮೈಸೂರಿನ ಕನ್ನಡ ಕ್ರಿಯಾಸಮಿತಿ ನಗರದಲ್ಲಿ ಬುಧವಾರ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ‘ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ: ಆತಂಕ ಮತ್ತು ನಿವಾರಣೆ’ ಎಂಬ ವಿಷಯದ ಮೇಲೆ ಚರ್ಚೆ ನಡೆಯಿತು.

ಎಂ. ಚಿದಾನಂದ ಮೂರ್ತಿ, ಸಂಶೋಧಕ: ಮಾತೃಭಾಷೆ ಶಿಕ್ಷಣ ಹೆಚ್ಚು ಪರಿಣಾಮಕಾರಿಯಾಗಿರಲಿದೆ. ಆಂಗ್ಲಭಾಷೆಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಬೇಡ.

ಸಿದ್ಧಲಿಂಗಯ್ಯ, ಕವಿ: ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಆರಂಭಿಸುವ ಮೂಲಕ ನಾಡಿನ ಭಾಷೆ, ಸಂಸ್ಕೃತಿ, ಜೀವನ ವಿಧಾನಕ್ಕೆ ಕೊಡಲಿಪೆಟ್ಟು ನೀಡುವ ಕೆಲಸವಾಗಿದೆ. ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಾಗಿಸಲು ಯಡಿಯೂರಪ್ಪ ನೇತೃತ್ವದ ಸರ್ಕಾರವು ಸುಗ್ರೀವಾಜ್ಞೆ ಸಿದ್ಧಪಡಿಸಲಿ.

ಎಲ್. ಹನುಮಂತಯ್ಯ, ರಾಜ್ಯಸಭಾ ಸದಸ್ಯ: ದೆಹಲಿ ಮಾದರಿಯಲ್ಲಿ ಪ್ರಾಥಮಿಕ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕು. ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣ ಮಾಡಿ, ಸಮಾನ ಶಿಕ್ಷಣ ಜಾರಿ ಮಾಡಬೇಕು.ಜಿಡಿಪಿಯಲ್ಲಿ ಶಿಕ್ಷಣಕ್ಕೆ ನೀಡುತ್ತಿರುವ ಪಾಲನ್ನು ಹೆಚ್ಚಿಸಬೇಕು.

ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಸಾಹಿತಿ: ಭಾಷಾವಾರು ಪ್ರಾಂತ್ಯಕ್ಕೆ ಅನುಗುಣವಾಗಿ ಭಾಷಾನೀತಿ ಹಾಗೂ ಪ್ರಾಥಮಿಕ ಶಿಕ್ಷಣ ನೀತಿ ಇರಬೇಕು. ಪ್ರಾದೇಶಿಕ ಭಾಷೆಗಳು ಪ್ರಾಥಮಿಕ ಶಿಕ್ಷಣದಿಂದ ಮರೆಯಾದರೆ ಮುಂದೆ ಉಳಿಯುವುದಿಲ್ಲ. ತಯಾರಿ ಇಲ್ಲದೆಯೇ ಕೆಪಿಎಸ್‌ ಶಾಲೆಗಳನ್ನು ಆರಂಭಿಸಲಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕರನ್ನು ಅನ್ಯ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುವುದನ್ನೂ ನಿಲ್ಲಿಸಬೇಕು.

ವಿ.ಪಿ.ನಿರಂಜನಾರಾಧ್ಯ, ಶಿಕ್ಷಣ ತಜ್ಞ: 2010-11ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 54 ಲಕ್ಷ ಮಕ್ಕಳಿದ್ದರು. 2018-19ರಲ್ಲಿ 43 ಲಕ್ಷಕ್ಕೆ ಇಳಿದಿದೆ. ಖಾಸಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 28 ಲಕ್ಷದಿಂದ 44 ಲಕ್ಷಕ್ಕೆ ಏರಿಕೆಯಾಗಿದೆ. ಸದ್ಯ ಸರ್ಕಾರವು ಜಿಡಿಪಿಯಲ್ಲಿ ಶೇ 1ಕ್ಕಿಂತ ಕಡಿಮೆ ಖರ್ಚು ಮಾಡುತ್ತಿದೆ. ಶೇ 5ರಷ್ಟಾದರೂ ಖರ್ಚು ಮಾಡಿದರೆ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ತಲುಪುತ್ತವೆ.

ಮನು ಬಳಿಗಾರ್, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ: ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ನೀಡುವಂತೆ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರನ್ನು ಒಳಗೊಂಡ ನಿಯೋಗದ ಮೂಲಕ ಸರ್ಕಾರಕ್ಕೆ ಈ ಹಿಂದೆ ಮನವಿ ಮಾಡಿದ್ದೇವು. ಮಾತೃಭಾಷೆ ಶಿಕ್ಷಣ ಅಗತ್ಯ ಎಂಬ ನಿಲುವಿಗೆ ಸದಾ ಬದ್ಧನಾಗಿರುವೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು

*ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುವುದು

*ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ರದ್ದು ಮಾಡುವಂತೆ ಆಗ್ರಹಿಸುವುದು

*ಕನ್ನಡ ಮಾಧ್ಯಮ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸುವುದು

*ಮಾತೃಭಾಷೆ ಶಿಕ್ಷಣದ ಮಹತ್ವವನ್ನು ಸರ್ಕಾರಕ್ಕೆ ಮನದಟ್ಟು ಮಾಡಿಸುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT