ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷರತ್ತುಬದ್ಧ ಜಾಮೀನು: ಕರವೇ ಅಧ್ಯಕ್ಷ ನಾರಾಯಣಗೌಡ ಜೈಲಿನಿಂದ ಬಿಡುಗಡೆ

Published 10 ಜನವರಿ 2024, 18:45 IST
Last Updated 10 ಜನವರಿ 2024, 18:45 IST
ಅಕ್ಷರ ಗಾತ್ರ

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಮತ್ತು ಹಲಸೂರುಗೇಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ಬುಧವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು.

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಪ್ರಕರಣದಲ್ಲಿ ನಾರಾಯಣಗೌಡ ಅವರನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದರು. ಆ ಪ್ರಕರಣದಲ್ಲಿ ಜಾಮೀನು ಲಭಿಸಿ, ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ 2017ರಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಮತ್ತೆ ಅವರನ್ನು ಬಂಧಿಸಲಾಗಿತ್ತು.

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನಾರಾಯಣಗೌಡ ಅವರು ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದರು ಎಂಬ ಕಾರಣಕ್ಕೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಯಾಗಿತ್ತು. ಈ ಪ್ರಕರಣದಲ್ಲಿ ಮಂಗಳವಾರ ಅವರನ್ನು ಮತ್ತೆ ಬಂಧಿಸಲಾಗಿತ್ತು. ಅವರ ಪರ ವಕೀಲ ಎಲ್.ಜಿ.ಕುಮಾರ್, 30ನೇ ಎಸಿಎಂಎಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಬುಧವಾರ ಮಧ್ಯಾಹ್ನ ₹1 ಲಕ್ಷ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಪಡೆದು ಜಾಮೀನು ನೀಡಿತ್ತು.

ಈ ಪ್ರಕ್ರಿಯೆ ನಡೆಯುತ್ತಿದ್ದ ವೇಳೆಯೇ ಹಲಸೂರು ಗೇಟ್ ಪೊಲೀಸರು ಕೊರೊನಾ ಸಂದರ್ಭದಲ್ಲಿ ಸರ್ಕಾರದ ಹೊರಡಿಸಿದ್ದ ಕೊರೊನಾ ನಿಮಯ ಉಲ್ಲಂಘನೆ ಪ್ರಕರಣದಲ್ಲಿ ಜೈಲಿನಲ್ಲೇ ನಾರಾಯಣಗೌಡ ಅವರನ್ನು ಬಂಧಿಸಿ, ಸಂಜೆ 4 ಗಂಟೆ ಸುಮಾರಿಗೆ 1ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದ್ದರು. ಇದೇ ವೇಳೆ ನಾರಾಯಣಗೌಡ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ₹50 ಸಾವಿರ ಬಾಂಡ್ ಮತ್ತು ₹5 ಸಾವಿರ ನಗದು ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿತು. ಬುಧವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು.

‘ಕಾಲು ನೋವಿನಿಂದ ಬಳಲುತ್ತಿರುವ ನಾರಾಯಣಗೌಡ ಅವರು ಜೈಲಿನಿಂದ ಬಿಡುಗಡೆಯಾದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT