ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸದಸ್ಯರು ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ, ‘ಜಾಮೀನಿನ ಮೇಲೆ ಹೊರಗಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿದ್ದವರು ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ನಡೆಸುವ ನೈತಿಕತೆ ಇದೆಯೆ? ಅಧಿಕಾರದಲ್ಲಿದ್ದಾಗ ಎಚ್.ಡಿ. ದೇವೇಗೌಡರ ಕುಟುಂಬದವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ 78 ನಿವೇಶನಗಳನ್ನು ಪಡೆದುಕೊಂಡಿದ್ದಾರೆ’ ಎಂದು ದೂರಿದರು.
‘ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಯಡಿಯೂರಪ್ಪ ಅವರ ನಕಲಿ ಸಹಿ ಮಾಡಿ, ಸಾವಿರಾರೂ ಕೋಟಿ ಲೂಟಿ ಮಾಡಿದ್ದಾರೆ. ಇದನ್ನು ಬಿಜೆಪಿಯವರೇ ಆರೋಪ ಮಾಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ‘ಸಿದ್ದರಾಮಯ್ಯ ಅವರಿಗೆ ಕೆಟ್ಟ ಹೆಸರು ತರಬೇಕು ಎಂಬ ಉದ್ದೇಶದಿಂದ ಮೈಸೂರು ಚಲೋ ಪಾದಯಾತ್ರೆ ಮಾಡಲಾಗುತ್ತಿದೆ. ರಾಜಭವನದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.
‘ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಎಲ್ಲ ನಿವೇಶನಗಳನ್ನು ಕಾನೂನು ಪ್ರಕಾರವೇ ಪಡೆದುಕೊಳ್ಳಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಹೇಳಿದರು.
ಒಕ್ಕೂಟದ ಸಂಚಾಲಕರಾದ ಮಾವಳ್ಳಿ ಶಂಕರ್, ಅನಂತನಾಯ್ಕ ಎನ್., ಎಣ್ಣೆಗೆರೆ ಆರ್. ವೆಂಕಟರಾಮಯ್ಯ, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
‘ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಇಂಗ್ಲಿಷ್ ಹಾಗೂ ಹಿಂದಿ ಓದಲು ಬರುವುದಿಲ್ಲ. ಮುಡಾ ಹಗರಣದ ಕುರಿತು ಟಿ.ಜೆ. ಅಬ್ರಾಹಂ ಸಲ್ಲಿಸಿರುವ 250 ಪುಟಗಳ ದೂರಿನಲ್ಲಿ ಒಂದು ಪುಟವನ್ನೂ ಓದದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಸರಿಯಲ್ಲ’ ಎಂದು ಗ್ಯಾರಂಟಿ ಅನುಷ್ಠಾನ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ ದೂರಿದರು.
‘ರಾಜ್ಯಪಾಲರು ಅನಕ್ಷರಸ್ಥ ಆದಿವಾಸಿ’ ಎಂದು ಟೀಕಾಪ್ರಹಾರ ನಡೆಸಿದ್ದ ರೇವಣ್ಣ ತಕ್ಷಣವೇ ಮಾತು ಹೊರಳಿಸಿ ‘ಅವರು ಯಾವ ಸಮುದಾಯದವರು ಎಂಬ ವಿಚಾರದ ಬಗ್ಗೆ ಮಾತನಾಡುವುದು ಬೇಡ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.