ಬುಧವಾರ, ಜುಲೈ 6, 2022
22 °C

ಫ್ರೀಡಂಪಾರ್ಕ್ ಬಿಟ್ಟು ಬೆಂಗಳೂರಲ್ಲಿ ಬೇರೆಲ್ಲೂ ಪ್ರತಿಭಟನೆ ನಡೆಸಬಾರದು: ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಗರದ ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್) ಹೊರತುಪಡಿಸಿ ಬೇರಾವುದೇ ಭಾಗದಲ್ಲಿ, ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ಸರ್ಕಾರ ಖಾತರಿಪಡಿಸಬೇಕು‘ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತಂತೆ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ, ‘ತಕ್ಷಣವೇ ರಾಜ್ಯ ಸರ್ಕಾರ ಈ ಆದೇಶವನ್ನು ಜಾರಿಗೆ ತರಬೇಕು. ಆದೇಶದ ಪರಿಪಾಲನೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಕೋರ್ಟ್‌ಗೆ ವರದಿ ಸಲ್ಲಿಸಬೇಕು‘ ಎಂದು ನಿರ್ದೇಶಿಸಿದೆ.

‘ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟಿತ ರೂಪದಲ್ಲಿ ಪ್ರತಿಭಟನೆ, ಧರಣಿ, ಸಭೆ ನಡೆಸುವ ಮೂಲಕ ವಾಹನ ಸಂಚಾರ ಹೆಚ್ಚಿರುವ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಒಂದೊಮ್ಮೆ ಅಂತಹ ಬೆಳವಣಿಗೆ ಕಂಡುಬಂದರೆ ತಕ್ಷಣವೇ ಅದಕ್ಕೆ ನಿರ್ಬಂಧ ವಿಧಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ. 

‘ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 103 ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 188ರ ಅಡಿ ಇ–ಗೆಜೆಟೆಡ್‌ ನಿಯಮಗಳನ್ನು ಜಾರಿಗೊಳಿಸುವ ಹೊಣೆ ಸಂಬಂಧಪಟ್ಟ ಪೊಲೀಸ್ ಇನ್ಸ್‌ಪೆಕ್ಟರ್ ಮೇಲಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಇನ್ಸ್‌ಪೆಕ್ಟರ್ ಕ್ರಮ ಕೈಗೊಳ್ಳಬಹುದು‘ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದೆ.

ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಪರಿಣಾಮ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು 2022ರ ಮಾರ್ಚ್‌ನಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದಿದ್ದ ಪತ್ರದ ಅನುಸಾರ ಈ ಪಿಐಎಲ್‌ ದಾಖಲಿಸಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು