ಬೆಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಭಾನುವಾರ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಈ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯ ಜತೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಎಚ್ಚರ ವಹಿಸಬೇಕು ಎಂದು ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.