ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕನ್ನಡಿಗರಿಗೆ ಮೀಸಲಾತಿ ಪಟ್ಟು: ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ
Published 1 ಜುಲೈ 2024, 16:28 IST
Last Updated 1 ಜುಲೈ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಕ್ಷೇತ್ರದ ಸಂಸ್ಥೆಗಳಲ್ಲಿನ ಶೇ 100ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಟಿ.ಎ. ನಾರಾಯಣಗೌಡ ಬಣದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟಿಸಿದರು. 

‘ಕನ್ನಡಿಗರಿಗೆ ಕೆಲಸ ಕೊಟ್ಟರೆ ಶಾಂತಿ, ಇಲ್ಲದಿದ್ದರೆ ಕ್ರಾಂತಿ’, ‘ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ’ ಎಂಬ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದರು.

ಅಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, ‘ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಒದಗಿಸಬೇಕು‘ ಎಂದು ಒತ್ತಾಯಿಸಿದರು.

‘ಎಲ್ಲ ಖಾಸಗಿ ಸಂಸ್ಥೆಗಳಲ್ಲಿ, ಕೇಂದ್ರ–ರಾಜ್ಯ ಸರ್ಕಾರಗಳ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳ ಸಿ ಮತ್ತು ಡಿ ದರ್ಜೆಯ ಶೇ 100ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಸರೋಜಿನಿ ಮಹಿಷಿ ವರದಿಗೆ ಕಾನೂನು ಬಲ ನೀಡಿ ಅದನ್ನು ಜಾರಿಗೊಳಿಸಬೇಕು. ಕಾಯ್ದೆ ಜಾರಿಗೆ ಆಗುವವರೆಗೂ ಹೋರಾಟ ಕೈ ಬೀಡುವುದಿಲ್ಲ’ ಎಂದರು.

‘ರಾಜ್ಯ ಸರ್ಕಾರ ರೂಪಿಸುವ ಕಾನೂನಿನ ಪರಿಣಾಮಕಾರಿ ಜಾರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು. 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇಲ್ಲಿ ನೆಲೆಸಿರುವವವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನಡೆಸಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು’ ಎಂದು ಆಗ್ರಹಿಸಿದರು.

ನಟ ಪ್ರೇಮ್‌ ಮತ್ತು ನಟಿ ಪೂಜಾ ಗಾಂಧಿ ಪ್ರತಿಭಟನೆ ಬೆಂಬಲಿಸಿ ಮಾತನಾಡಿದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಸಮೀವುಲ್ಲಾ ಖಾನ್, ವೀರಸಂಗಯ್ಯ, ನಟಿ ಅಶ್ವಿನಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT