ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮದ ಹಗರಣ: ಸಿಎಂ, ಡಿಸಿಎಂ ರಾಜೀನಾಮೆಗೆ ಕೆಆರ್‌ಎಸ್‌ ಆಗ್ರಹ

Published 7 ಜೂನ್ 2024, 14:46 IST
Last Updated 7 ಜೂನ್ 2024, 14:46 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನೇರವಾಗಿ ಭಾಗಿಯಾಗಿದ್ದು, ಅವರು ರಾಜೀನಾಮೆ ನೀಡಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸಿದೆ.

‘ಹಣ ಅಕ್ರಮ ವರ್ಗಾವಣೆ ಹಗರಣವು ರಾಜ್ಯ ಸರ್ಕಾರದಲ್ಲಿನ ಭ್ರಷ್ಟಾಚಾರ ಮತ್ತು ದುರಾಡಳಿತವನ್ನು ತೋರಿಸುತ್ತದೆ. ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯುವ ಮೂಲಕ ಹಗರಣವನ್ನು ಈ ಹಂತದಲ್ಲಿಯೇ ಮುಚ್ಚಿಹಾಕಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ’ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಎಸ್‌. ಲಿಂಗೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಸಿ.ಎನ್‌. ದೀಪಕ್‌ ಆರೋಪಿಸಿದ್ದಾರೆ.

‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಡಲಾದ ಹಣವನ್ನು ಸರ್ಕಾರದ ಇತರೆ ಇಲಾಖೆಗಳಿಗೆ ಮತ್ತು ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವ ಪ್ರಯತ್ನ ನಡೆಸಿತ್ತು. ಆದರೆ ಈಗ ಇದೇ ಹಣವನ್ನು ಲೂಟಿ ಮಾಡಲಾಗಿದ್ದು, ಚುನಾವಣೆಗೆ ಬಳಸಿಕೊಳ್ಳಲಾಗಿದೆ. ದಲಿತ, ಪರಿಶಿಷ್ಟ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ದಮನಿತರ ಶ್ರೇಯೋಭಿವೃದ್ಧಿ ಮಾಡಲಾಗುವುದು ಎಂದು ಹೇಳಿದ್ದ ಸರ್ಕಾರ, ಅವರಿಗಾಗಿ ಮೀಸಲಿಟ್ಟಿರುವ ಹಣವನ್ನು ದೋಚುತ್ತಿದೆ’ ಎಂದು ದೂರಿದ್ದಾರೆ.

‘ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಇದೇ ರೀತಿ ಅವ್ಯವಹಾರ ನಡೆದಿರುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಎಲ್ಲ ನಿಗಮಗಳ ಕಳೆದ ಐದು ವರ್ಷಗಳ ಹಣಕಾಸಿನ ವ್ಯವಹಾರಗಳ ತನಿಖೆಗೆ ಪ್ರತ್ಯೇಕ ತನಿಖಾ ತಂಡ ರಚಿಸಬೇಕು’ ಎಂದು ಪ್ರಕಟಣೆಯಲ್ಲಿ ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT