ಮೋಹನ ಆಳ್ವಗೆ ಕಸಾಪ ದತ್ತಿ ಪ್ರಶಸ್ತಿ ಪ್ರದಾನ

ಬೆಂಗಳೂರು: ‘ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಉತ್ತಮ ಸ್ಥಿತಿಯಲ್ಲಿರಬೇಕು. ಈ ನಿಟ್ಟಿನಲ್ಲಿ ಈ ಎರಡೂ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಕ್ರಿಯಾಶೀಲವಾಗಬೇಕು’ ಎಂದು ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ ಆಳ್ವ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಗುರುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ ಸ್ವೀಕರಿಸಿದರು. ಈ ಪ್ರಶಸ್ತಿಯು ₹ 51 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.
‘ನಮ್ಮಲ್ಲಿನ ಸರಾರಾತ್ಮಕ ಧೋರಣೆಗೆಳು ಏಳ್ಗೆಗೆ ಕಾರಣವಾಗುತ್ತವೆ. ಸಾಮಾನ್ಯ ಸರ್ಕಾರಿ ಬಯಲು ಕನ್ನಡ ಶಾಲೆಯಲ್ಲಿ ಕಲಿತ ನನ್ನನ್ನು ಮುನ್ನಡೆಸಿರುವುದೇ ಸಕಾರಾತ್ಮಕ ಧೋರಣೆ. ತಮ್ಮ ಸಮರ್ಥ ಆಡಳಿತದಿಂದ ಈ ನಾಡಿನ ಅಭಿವೃದ್ಧಿಯ ಚಹರೆಯನ್ನೇ ನಾಲ್ವಡಿ ಕೃಷ್ಣರಾಜ ಒಡೆಯರ್ ಬದಲಿಸಿದರು. ಅವರನ್ನು ರಾಜರ್ಷಿ ಎಂದಷ್ಟೇ ಅಲ್ಲ, ಬ್ರಹ್ಮರ್ಷಿ ಎಂದು ಕರೆದರೂ ತಪ್ಪಿಲ್ಲ’ ಎಂದರು.
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಮಾತನಾಡಿ, ‘ಶಿಕ್ಷಣ, ಸಂಸ್ಕೃತಿ, ಸಾಹಿತ್ಯ, ಕೃಷಿ, ಉದ್ದಿಮೆ ಸೇರಿದಂತೆ ಹತ್ತು ಹಲವು ಕ್ಷೇತ್ರಗಳಿಗೆ ಕೊಡುಗೆ ನೀಡುವ ಮೂಲಕ ಮೋಹನ ಆಳ್ವ ಈ ನಾಡನ್ನು ಶ್ರೀಮಂತಗೊಳಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಆಶಯಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಅವರಿಗೆ, ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಬೇಕಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶಿಫಾರಸು ಮಾಡಲಾಗುವುದು’ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.