ಸೋಮವಾರ, ಸೆಪ್ಟೆಂಬರ್ 20, 2021
24 °C

ಶಿಕ್ಷಕರ ವರ್ಗಾವಣೆಗೆ ಮತ್ತೆ ಕೆಎಟಿ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ (2020–21) ವರ್ಗಾವಣೆ ಪ್ರಕ್ರಿಯೆಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಮತ್ತೊಮ್ಮೆ ತಡೆಯಾಜ್ಞೆ ನೀಡಿದೆ. ಹೀಗಾಗಿ, ಜೂನ್‌ 30ರಂದು ಹೊರಡಿಸಿದ್ದ ಅಧಿಸೂಚನೆಯಂತೆ ಆರಂಭಗೊಂಡಿದ್ದ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿದೆ.

ನ. 11ರಂದು ಮೊದಲ ಬಾರಿ ಹೊರಡಿಸಿದ್ದ ವರ್ಗಾವಣೆ ಅಧಿಸೂಚನೆಯನ್ನೂ ಕೆಎಟಿ ರದ್ದುಪಡಿಸಿತ್ತು. ವರ್ಗಾವಣೆ ಬಯಸಿ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅರ್ಜಿ ಸಲ್ಲಿಸಿದ್ದಾರೆ.

2019–20ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದವರಿಗೆ ಕೌನ್ಸೆಲಿಂಗ್‌ ವೇಳೆ ವಿಶೇಷ ಆದ್ಯತೆ ನೀಡುವ ‌ಪ್ರಸ್ತಾವ ‘ಶಿಕ್ಷಕರ ವರ್ಗಾವಣೆ ಕಾಯ್ದೆ–2020’ರಲ್ಲಿ ಇಲ್ಲದಿದ್ದರೂ ಅಧಿಸೂಚನೆಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರದ ಈ ನಡೆಯನ್ನು ಕೆಲವು ಶಿಕ್ಷಕರು ಕೆಎಟಿಯಲ್ಲಿ ಪ್ರಶ್ನಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ, ಶಿಕ್ಷಕರ ಪರವಾಗಿ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಕೆಎಟಿ ತೀರ್ಪನ್ನೇ ಹೈಕೋರ್ಟ್‌ ಎತ್ತಿ ಹಿಡಿದಿತ್ತು.

ಹೀಗಾಗಿ, ಸುಗ್ರೀವಾಜ್ಞೆ ಮೂಲಕ ಕಾಯ್ದೆಗೆ ತಿದ್ದುಪಡಿ ತಂದು, 2019–20ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದವರಿಗೆ ಕೌನ್ಸೆಲಿಂಗ್‌ ವೇಳೆ ವಿಶೇಷ ಆದ್ಯತೆ ನೀಡಿ ‌ಪರಿಷ್ಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿತ್ತು. ವರ್ಗಾವಣೆಗೆ ಅರ್ಹ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಸೆ. 8ರವರೆಗೆ ಅವಕಾಶ ನೀಡಲಾಗಿತ್ತು. ಅಲ್ಲದೆ, 2019–20ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದವರಿಗೆ ಸೆ. 15ರಿಂದ ಕೌನ್ಸೆಲಿಂಗ್‌ ನಡೆಸಲು ನಿರ್ಧರಿಸಲಾಗಿತ್ತು.

ಈ ಮಧ್ಯೆ, 2016–17ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾಗಿರುವ ಶಿಕ್ಷಕರು ಮತ್ತೆ ಕೆಎಟಿ ಮೆಟ್ಟಿಲೇರಿದ್ದಾರೆ. ‘ತಮಗೂ ವಿಶೇಷ ಆದ್ಯತೆ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ. ‌ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ನ್ಯಾಯಮಂಡಳಿ, ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು