ಗುರುವಾರ , ಅಕ್ಟೋಬರ್ 22, 2020
22 °C

ಕೆಆರ್‌ಐಡಿಎಲ್‌ ಅಕ್ರಮ: ನ್ಯಾಯಾಂಗ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮವು (ಕೆಆರ್‌ಐಡಿಎಲ್‌) ನವನಗರೋತ್ಥಾನ ಯೋಜನೆಯ ಕಾಮಗಾರಿಗಳಲ್ಲಿ ನಡೆಸಿದ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷ (ಆಪ್) ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ,'ನಗರದ ಸಮಗ್ರ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿ ₹8,343 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ₹5 ಸಾವಿರ ಕೋಟಿಗೂ ಹೆಚ್ಚಿನ ಕಾಮಗಾರಿ
ಗಳನ್ನು ಕೆಆರ್‌ಐಡಿಎಲ್‌ಗೆ ನೀಡಲಾಗಿದೆ. ತುರ್ತು ಕಾಮಗಾರಿಗಳ ಹೆಸರಿನಲ್ಲಿ ಕೋಟ್ಯಂತರ ಹಣ ಲೂಟಿ ಮಾಡಲಾಗಿದೆ' ಎಂದು ಆರೋಪಿಸಿದರು.

'ಎಲ್ಲ ಕಾಮಗಾರಿಗಳ ಪ್ರಾರಂಭಿಕ ಪರಿಶೀಲನೆಯಲ್ಲಿ ಅನೇಕ ಅಕ್ರಮಗಳನ್ನು ಪತ್ತೆ ಹಚ್ಚಲಾಗಿದೆ. ಒಂದೇ ಕಾಮಗಾರಿಗೆ ಬಿಬಿಎಂಪಿ ಹಾಗೂ ಕೆಆರ್‌ಐಡಿಎಲ್‌ ಎರಡೂ ಸಂಸ್ಥೆಗಳಿಂದ ಬಿಲ್ ಸಲ್ಲಿಸಿ, ಹಣ ಪಡೆದಿರುವ ಪ್ರಕರಣಗಳನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೇ ಪತ್ತೆ ಹಚ್ಚಿದ್ದಾರೆ' ಎಂದು ವಿವರಿಸಿದರು.

'ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಣ್ಣುತಪ್ಪಿಸಿ, ಇಷ್ಟು ದೊಡ್ಡಮಟ್ಟದ ಹಗರಣ ಸಾಧ್ಯವೇ ಇಲ್ಲ. ಇದರಲ್ಲಿ ಶಾಸಕರ ಕೈವಾಡವೂ ಇರಬಹುದು. ಅಧಿಕಾರಿಗಳ ಜತೆಗೆ ರಾಜಕಾರಣಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕಿದೆ. ಈ ಹಗರಣವನ್ನು ಗಂಭೀರವಾಗಿ ಪರಿಗಣಿಸಿ, ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು' ಎಂದು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು