ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವೂ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
‘ಈ ಹಿಂದಿನ ಬಿಜೆಪಿ ಸರ್ಕಾರದ ನಿಯಂತ್ರಣವಿಲ್ಲದ ಭ್ರಷ್ಟಾಚಾರ, ಕಮಿಷನ್ ದಂಧೆ, ದುರಾಡಳಿತದಿಂದ ಬೇಸತ್ತ ಜನರು, ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟಿದ್ದರು. ಜನರು ಉತ್ತಮ ಆಡಳಿತದ ನಿರೀಕ್ಷೆಯಲ್ಲಿದ್ದರು. ಆದರೆ, ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ಸಹ ನೌಕರರ ವರ್ಗಾವಣೆ ದಂಧೆಯನ್ನಾಗಿ ಮಾಡಿಕೊಂಡಿದೆ. ತಾವು ಈ ಹಿಂದಿನ ಸರ್ಕಾರಕ್ಕಿಂತ ಯಾವುದೇ ರೀತಿಯಲ್ಲಿ ಭಿನ್ನವಿಲ್ಲವೆಂದು ತೋರಿಸಿದೆ’ ಎಂದು ಪ್ರತಿಭಟನಕಾರರು ಆಪಾದಿಸಿದರು.
ಪಕ್ಷದ ಉಪಾಧ್ಯಕ್ಷ ಎಸ್.ಎಚ್. ಲಿಂಗೇಗೌಡ ಮಾತನಾಡಿ, ‘ರಾಜ್ಯದಲ್ಲಿ ದುರಾಡಳಿತವಿದ್ದು, ಈ ಹಿಂದಿನ ಬಿಜೆಪಿ ಸರ್ಕಾರದ ಮುಂದುವರಿದ ಭಾಗವಾಗಿ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ರಾಜ್ಯದ ಮೂರು ಪ್ರಮುಖ ಪಕ್ಷಗಳು ಯಾವುದೇ ರೀತಿಯಲ್ಲಿ ಭಿನ್ನವಿಲ್ಲ’ ಎಂದು ಹೇಳಿದರು.
‘ನಿರಂತರವಾಗಿ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ವ್ಯವಸ್ಥೆಯನ್ನು ಕಟ್ಟಿಕೊಳ್ಳಲು ವಿಫಲವಾಗಿರುವುದೇ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಇದನ್ನು ತೊಡೆದು ಹಾಕಲು ಕೆಆರ್‌ಎಸ್ ಪಕ್ಷವು ಹೋರಾಟ ನಡೆಸುತ್ತಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.