ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಚ್‌ಡಿಕೆ ವಿರುದ್ಧ ಚಾರ್ಜ್‌ಶೀಟ್: ಎಸ್‌ಐಟಿಯಿಂದ ರಾಜ್ಯಪಾಲರಿಗೆ ಮತ್ತೆ ಪ್ರಸ್ತಾವ

Published 20 ಆಗಸ್ಟ್ 2024, 1:02 IST
Last Updated 20 ಆಗಸ್ಟ್ 2024, 1:02 IST
ಅಕ್ಷರ ಗಾತ್ರ

ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ (ಎಸ್‌ಎಸ್‌ವಿಎಂ) ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ರಾಜ್ಯಪಾಲರಿಗೆ ಸೋಮವಾರ ಮತ್ತೆ ಪ್ರಸ್ತಾವ ಸಲ್ಲಿಸಿದೆ.

ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್‌ಎಸ್‌ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್‌. ಸಂತೋಷ್‌ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿಯಲ್ಲಿನ ಉಲ್ಲೇಖ ಆಧರಿಸಿ ಲೋಕಾಯುಕ್ತದ ಎಸ್‌ಐಟಿ ತನಿಖೆ ನಡೆಸುತ್ತಿದೆ.

ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ 2023ರ ನವೆಂಬರ್‌ 21ರಂದು ಪ್ರಸ್ತಾವ ಸಲ್ಲಿಸಿದ್ದ ಲೋಕಾಯುಕ್ತದ ಎಸ್‌ಐಟಿ ಮುಖ್ಯಸ್ಥರಾಗಿರುವ ಐಜಿಪಿ ಎಂ. ಚಂದ್ರಶೇಖರ್‌, ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಕೋರಿದ್ದರು.

‘ಪ್ರಸ್ತಾವವು ದೀರ್ಘ ಕಾಲದಿಂದ ರಾಜ್ಯಪಾಲರ ಬಳಿಯಲ್ಲೇ ಇದೆ. ಜುಲೈ 29ರ ದಿನಾಂಕ ಉಲ್ಲೇಖಿಸಿ ರಾಜ್ಯಪಾಲರು ಬರೆದಿದ್ದ ಪತ್ರವೊಂದು ಆಗಸ್ಟ್‌ 8ರಂದು ಎಸ್‌ಐಟಿಗೆ ತಲುಪಿತ್ತು. ಕುಮಾರಸ್ವಾಮಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ಸೂಚಿಸಲಾಗಿತ್ತು. ಎಸ್‌ಐಟಿ ಮುಖ್ಯಸ್ಥರು ರಾಜ್ಯಪಾಲರು ಕೋರಿದ್ದ ಸ್ಪಷ್ಟನೆಗಳಿಗೆ ಉತ್ತರಗಳೊಂದಿಗೆ ಸೋಮವಾರ ಸಂಜೆ ಪತ್ರವೊಂದನ್ನು ರಾಜಭವನಕ್ಕೆ ರವಾನಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಮತ್ತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ’ ಎಂದು ಲೋಕಾಯುಕ್ತದ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಅನುಮತಿ ಏಕೆ ಅಗತ್ಯ?: ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ–1988ಕ್ಕೆ 2018ರಲ್ಲಿ ತಿದ್ದುಪಡಿ ತರಲಾಗಿದೆ. ಅಲ್ಲಿಯವರೆಗೂ, ಹುದ್ದೆಯಿಂದ ನಿರ್ಗಮಿಸಿದ ಚುನಾಯಿತ ಪ್ರತಿನಿಧಿಗಳು ಅಥವಾ ನಿವೃತ್ತ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಆರೋಪಪಟ್ಟಿ ಸಲ್ಲಿಸಲು ಪೂರ್ವಾನುಮತಿ ಅಗತ್ಯವಿರಲಿಲ್ಲ. 2018ರ ತಿದ್ದುಪಡಿಯ ಪ್ರಕಾರ, ಅಪರಾಧ ಹಿಂದೆಯೇ ನಡೆದಿದ್ದರೂ ತಿದ್ದುಪಡಿಯ ಬಳಿಕ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಕ್ಷಮ ಪ್ರಾಧಿಕಾರದ ಅನುಮತಿ ಅಗತ್ಯ. ಈ ಕಾರಣಕ್ಕಾಗಿಯೇ ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT