ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಬೆಂಬಲಿಸಲು ವಿವಿಧ ಸಂಘಟನೆಗಳು ಕರೆ

Published 24 ಏಪ್ರಿಲ್ 2024, 14:59 IST
Last Updated 24 ಏಪ್ರಿಲ್ 2024, 14:59 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವಂತೆ ವಿವಿಧ ಸಂಘಟನೆಗಳು ಮನವಿ ಮಾಡಿವೆ.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ಅಧ್ಯಕ್ಷ ಪಿಟಿಸಿಎಲ್‌ ಮಂಜುನಾಥ್, ‘ರಾಜ್ಯದಲ್ಲಿ ಕಾಂಗ್ರೆಸ್‌ ದಲಿತರಿಗೆ, ಬಡವರಿಗೆ ಅನುಕೂಲವಾಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಪಿಟಿಸಿಎಲ್‌ ಕಾಯ್ದೆಗೆ ಕಾಲಮಿತಿ ಅನ್ವಯಿಸುವುದಿಲ್ಲವೆಂದು ತಿದ್ದುಪಡಿ ಮಾಡಿದೆ. ಆದ್ದರಿಂದ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಎಲ್ಲ ಸಮುದಾಯದವರು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು’ ಎಂದು ತಿಳಿಸಿದರು.

‘ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಬೇಕು’ ಎಂದು ಡಾ.ಬಿ.ಆರ್. ಅಂಬೇಡ್ಕರ್‌ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಶ್ರೀಧರ ಕಲಿವೀರ ಮನವಿ ಮಾಡಿದರು.

‘ಸಂವಿಧಾನ ಬದಲಾಯಿಸಲು ನಿರ್ಧರಿಸಿರುವ ಬಿಜೆಪಿಯ ಅಭ್ಯರ್ಥಿಗಳನ್ನು ಸೋಲಿಸಬೇಕು. ಎನ್‌ಡಿಎ ಮೈತ್ರಿಕೂಟವು ತನ್ನ ಪ್ರಣಾಳಿಕೆಯಲ್ಲಿ ಸುಳ್ಳುಗಳ ಭರವಸೆ ನೀಡಿದ್ದು, ಮತದಾರರನ್ನು ವಂಚಿಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ 400 ಸಂಸದರು ಆಯ್ಕೆಯಾದರೆ, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸಿದೆ’ ಎಂದು ದೂರಿದರು.

‘ಬಿಜೆಪಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೇರಿದಂತೆ ವಿವಿಧ ವಿಷಯಗಳಲ್ಲಿ ನಿರಂತರವಾಗಿ ಅನ್ಯಾಯ ಮಾಡಿಕೊಂಡು ಬಂದಿದೆ. ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕೋಲಿ, ಕುರುಬ ಸಮಾಜವನ್ನು ಎಸ್‌.ಟಿ ಪಟ್ಟಿಗೆ ಸೇರ್ಪಡೆ ಮಾಡುವ ಭರವಸೆ ನೀಡಿತ್ತು. ಆದರೆ, ಇದುವರೆಗೂ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಆದ್ದರಿಂದ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಹಿಂದ ಕರ್ನಾಟಕ ಅಲ್ಪಸಂಖ್ಯಾತರ ಹಿಂದುಳಿದವರ ದಲಿತರ ಒಕ್ಕೂಟವು ಕಾಂಗ್ರೆಸ್‌ಗೆ ಬೆಂಬಲಿಸಲು ನಿರ್ಧರಿಸಿದೆ’ ಎಂದು ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಶಿವಣ್ಣ ಹೇಳಿದರು.

‘ಸಂವಿಧಾನ ರಕ್ಷಣೆಗಾಗಿ ಆದಿಜಾಂಬವ ಸಮುದಾಯವು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಬೇಕು’ ಎಂದು ಕಾಂಗ್ರೆಸ್‌ ಪಾರ್ಟಿ ಆದಿಜಾಂಬವ ಯುವ ಸಮನ್ವಯ ಸಮಿತಿ ಕರ್ನಾಟಕದ ರಾಜ್ಯ ಸಂಯೋಜಕ ಏಳುಕೋಟೆಪ್ಪ ಎಸ್. ಪಾಟೀಲ್ ಮನವಿ ಮಾಡಿದರು.

‘ರಾಜ್ಯದ 31 ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಶೇ 57.2ರಷ್ಟು ಜನಸಂಖ್ಯೆ ಹೊಂದಿರುವ ಆದಿಜಾಂಬವ ಸಮುದಾಯವು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಿಸಲು ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿದರೆ ಮಾತ್ರ ದೇಶದ ಬಡವರು, ರೈತರು, ಕಾರ್ಮಿಕರು, ಪರಿಶಿಷ್ಟರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರು ನೆಮ್ಮದಿಯಿಂದ ಜೀವನ ನಡೆಸಬಹುದು’ ಎಂದರು.

‘ಒಳಮೀಸಲಾತಿಯನ್ನು ಜಾರಿಗೊಳಿಸದೇ, ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ರದ್ದುಪಡಿಸಿ, ಸಂವಿಧಾನವನ್ನು ಬದಲಿಸಲು ಹುನ್ನಾರ ನಡೆಸುತ್ತಿರುವ ಬಿಜೆಪಿ ಪಕ್ಷಕ್ಕೆ ಮಾದಿಗ ಸಮುದಾಯದವರು ಮತ ಹಾಕಬಾರದು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಭರವಸೆ ನೀಡುವ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ನೀಡಬೇಕು’ ಎಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟವು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT