ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದ್ದು, ಕೃತ್ಯ ಎಸಗಿರುವ ಆರೋಪದಡಿ 22 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
‘ಸೋಮವಾರ ಮಧ್ಯಾಹ್ನ ನಡೆದಿರುವ ಘಟನೆ ಸಂಬಂಧ ಪೋಷಕರ ಹೇಳಿಕೆ ಪಡೆಯಲಾಗಿದೆ. ಅತ್ಯಾಚಾರ (ಐಪಿಸಿ 376), ಕೊಲೆ (ಐಪಿಸಿ 302) ಆರೋಪ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೃತ್ಯದ ನಂತರ ಪರಾರಿಯಾಗಿದ್ದ ಆರೋಪಿಯನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯವನ್ನು ಕೋರಲಾಗುವುದು’ ಎಂದು ಹೇಳಿವೆ.
ತಲೆಗೆ ಹೊಡೆದು ಹತ್ಯೆ: ‘ಬಾಲಕಿಯ ಪೋಷಕರು, ಗಾರ್ಮೆಂಟ್ಸ್ ಕಾರ್ಖಾನೆ ಉದ್ಯೋಗಿಗಳು. ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ವಾಸವಿದ್ದರು. ಬಾಲಕಿ ಹಾಗೂ ಅವರ ಪೋಷಕರಿಗೆ ಪರಿಚಯವಿರುವ ಆರೋಪಿಯೇ ಕೃತ್ಯ ಎಸಗಿದ್ದಾನೆ’ ಎಂದು ಪೊಲೀಸ್ ಮೂಲಗಳು ವಿವರಿಸಿವೆ.
‘ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿ, ಮೃಗೀಯವಾಗಿ ವರ್ತಿಸಿದ್ದ. ಅಳುತ್ತಿದ್ದ ಬಾಲಕಿಯ ತಲೆಗೆ ಆಯುಧದಿಂದ ಹೊಡೆದಿದ್ದ. ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಳು. ಬಳಿಕ, ಆರೋಪಿ ಪರಾರಿಯಾಗಿದ್ದ. ಮೃತದೇಹ ನೋಡಿದ್ದ ಪೋಷಕರು, ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.