ಮದುವೆಯಾಗಿ 3 ತಿಂಗಳು: ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿ ಪೃಥ್ವಿರಾಜ್ (31) ಹನ್ನೊಂದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಆಂಧ್ರಪ್ರದೇಶದ ಪೃಥ್ವಿರಾಜ್ ಎಂಬಿಬಿಎಸ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸದ್ಯ ತರಬೇತಿಯಲ್ಲಿದ್ದರು. ಮುಂದಿನ ಐದು ತಿಂಗಳಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮುಗಿಯುತ್ತಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಎಂ.ಎಸ್. ರಾಮಯ್ಯ ಆಸ್ಪತ್ರೆಯ ವೈದ್ಯೆಯೊಬ್ಬರನ್ನು ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್ ಮದುವೆಯಾಗಿದ್ದರು. ಅಮೃತಹಳ್ಳಿ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಫ್ಲ್ಯಾಟ್‌ನಲ್ಲಿ ದಂಪತಿ ವಾಸವಿದ್ದರು’ ಎಂದು ತಿಳಿಸಿವೆ.
‘ಮಂಗಳವಾರ ಆಸ್ಪತ್ರೆಗೆ ಹೋಗಿ ಬಂದಿದ್ದ ದಂಪತಿ ಊಟ ಮಾಡಿ ಮಲಗಿದ್ದರು. ಬುಧವಾರ ಬೆಳಿಗ್ಗೆ 5 ಗಂಟೆಗೆ ಎದ್ದಿದ್ದ ಪೃಥ್ವಿರಾಜ್, ಹನ್ನೊಂದನೇ ಮಹಡಿಗೆ ಹೋಗಿ ಜಿಗಿದಿದ್ದರು. ನೆಲಮಹಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಅದನ್ನು ನೋಡಿದ್ದ ಭದ್ರತಾ ಸಿಬ್ಬಂದಿ ಹಾಗೂ ಇತರರು, ಪತ್ನಿಗೆ ವಿಷಯ ತಿಳಿಸಿದ್ದರು’ ಎಂದೂ ಮೂಲಗಳು ಹೇಳಿವೆ.
ಸಾವಿಗೂ ಮುನ್ನ ಸಂದೇಶ: ‘ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾದ ಪೃಥ್ವಿರಾಜ್, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಸಾವಿಗೂ ಮುನ್ನ ತಮ್ಮ ಮೊಬೈಲ್‌ನಲ್ಲಿ ತೆಲುಗು ಭಾಷೆಯಲ್ಲಿ ಸಂದೇಶ ಬರೆದಿದ್ದಾರೆ. ಅದನ್ನೂ ಪರಿಶೀಲಿಸಲಾಗುತ್ತಿದೆ’ ಎಂದೂ ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.