ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿತರ ಮರಣ ಪ್ರಮಾಣದಲ್ಲಿ ಹೆಚ್ಚಳ: ಇಎಸ್‌ಐ ಆಸ್ಪತ್ರೆಗೆ ಸುಧಾಕರ್‌ ಭೇಟಿ

ಪರಿಶೀಲನಾ ಸಮಿತಿ ರಚನೆಗೆ ಸೂಚನೆ
Last Updated 8 ಆಗಸ್ಟ್ 2020, 22:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜಾಜಿನಗರದ ಇಎಸ್‌ಐ ಆಸ್ಪತ್ರೆಗೆ ದಾಖಲಾದ ಕೊರೊನಾ ಸೋಂಕಿತರಲ್ಲಿ ಮೃತಪಡು ವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸದ್ಯ ಅಲ್ಲಿ ಮರಣ ಪ್ರಮಾಣಶೇ 12.8 ರಷ್ಟಿದೆ.

ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಕೊರೊನಾ ಸೋಂಕಿತರಿಗೆ ನೀಡಲಾಗಿರುತ್ತಿರುವ ಚಿಕಿತ್ಸೆ ಹಾಗೂ ವೈದ್ಯಕೀಯ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಕಾರಣ ತಿಳಿಯಲು ಪ್ರತ್ಯೇಕ ಸಮಿತಿ ರಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ರೋಗಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಆರೋಗ್ಯ ವಿಚಾರಿಸಿದರು.

‘ಆಸ್ಪತ್ರೆಯಲ್ಲಿ ಈವರೆಗೆ 421 ಕೋವಿಡ್ ರೋಗಿಗಳು ದಾಖಲಾಗಿದ್ದಾರೆ. ಸೋಂಕಿತರಲ್ಲಿ 54 ಮಂದಿ ಮೃತಪಟ್ಟಿದ್ದು, ಮರಣ ಪ್ರಮಾಣ ಶೇ 12.8 ರಷ್ಟಿದೆ.ಕ್ಯಾನ್ಸರ್ ರೋಗಿಗಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ. ಇನ್ನೂ ಹಲವು ರೋಗಿಗಳು ದೇಹಸ್ಥಿತಿ ಉಲ್ಬಣಗೊಂಡ ಬಳಿಕ ದಾಖಲಾಗುತ್ತಿದ್ದಾರೆ. ಹೀಗಾಗಿ ಮರಣ ಪ್ರಮಾಣ ಹೆಚ್ಚಾಗಿದ್ದು, ಈ ಸಂಬಂಧ ಪರಿಶೋಧನಾ ವರದಿ ರೂಪಿಸಲು ಆದೇಶಿಸಲಾಗಿದೆ’ ಎಂದು ವೈದ್ಯಾಧಿಕಾರಿಗಳು ಹೇಳಿದರು.

‘ಕೊರೊನಾ ಸೋಂಕಿತ 42 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷಾ ಪ್ರಯೋಗಾಲಯ ನಿರ್ಮಿಸಿದ್ದು, ಮುಂದಿನ ವಾರದಿಂದ ಕಾರ್ಯಾರಂಭಿಸಲಿದೆ’ ಎಂದು ಮಾಹಿತಿ ನೀಡಿದರು.

ಸುದ್ದಿಗಾರ ರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ‘ಆಸ್ಪತ್ರೆಯಲ್ಲಿ 494 ಹಾಸಿಗೆಗಳಿದ್ದು, 150 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿದೆ. ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೋವಿಡ್ ಪೀಡಿತರಲ್ಲಿ ಇಬ್ಬರ ದೇಹಸ್ಥಿತಿ ಗಂಭೀರವಾಗಿದೆ. 10 ರೋಗಿಗಳು ತೀವ್ರ ನಿಗಾ ಘಟಕದಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರ ಜತೆಗೆ ಸ್ನಾತಕೋತ್ತರ ಪದವೀಧರರೂ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದರು.

ಪ್ರಕೃತಿ ವಿಕೋಪ ಸಂದರ್ಭದಲ್ಲೂ ರಾಜಕೀಯ

ಬೆಂಗಳೂರು: 'ಅತಿವೃಷ್ಟಿ ಮತ್ತು ಪ್ರವಾಹದಂಥ ಪ್ರಕೃತಿ ವಿಕೋಪದ ಸಂದರ್ಭದಲ್ಲೂ ವಿರೋಧ ಪಕ್ಷದ ನಾಯಕರು ಸರ್ಕಾರಕ್ಕೆ ರಚನಾತ್ಮಕವಾಗಿ ಸಲಹೆ ನೀಡುವುದು ಬಿಟ್ಟು ಕೇವಲ ರಾಜಕೀಯ ಮಾಡುವುದು ಎಷ್ಟು ಸರಿ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಬಳಿಯಿರುವ ಪ್ರತಿಮೆಗೆ ಶನಿವಾರ ಗೌರವಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ‘ಇಷ್ಟು ದಿನ ಕೋವಿಡ್ ನಿರ್ವಹಣೆಯನ್ನು ಮುಂದಿಟ್ಟುಕೊಂಡು ಟೀಕಿಸಿದರು; ಈಗ ಪ್ರವಾಹದ ವಿಚಾರಕ್ಕೂ ಟೀಕೆ ಮಾಡುತ್ತಿದ್ದಾರೆ. ಸರ್ಕಾರವನ್ನು ವಿರೋಧ ಮಾಡುವುದೇ ವಿರೋಧ ಪಕ್ಷದ ಕೆಲಸವಾಗಿದೆ’ ಎಂದು ಟೀಕಿಸಿದರು.

‘ಪ್ರವಾಹ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಅಪಾಯದ ಸ್ಥಳಗಳಿಂದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಕಳೆದ ವರ್ಷ ಉತ್ತರ ಕರ್ನಾಟಕ ಪ್ರದೇಶದ ನೆರೆ ಸಂತ್ರಸ್ತರಿಗೆ ನೆರವಾದ ರೀತಿಯಲ್ಲೇ ಸಹಾಯ ಹಸ್ತ ಚಾಚಲಾಗುತ್ತಿದೆ’ ಎಂದರು.

‘ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಪರಿಸ್ಥಿತಿ ನೋಡಿಕೊಳ್ಳುತ್ತಿದ್ದಾರೆ. ಎಲ್ಲ ಜಿಲ್ಲೆಗಳಿಗೂ ಅಗತ್ಯ ಸಂಪನ್ಮೂಲಗಳನ್ನು, ಸಾಮಗ್ರಿಗಳನ್ನು ಒದಗಿಸಲಾಗಿದೆ. ಜತೆಗೆ, ವೈದ್ಯಕೀಯ ನೆರವು ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT