ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕನ ಪತ್ನಿ ಮೊಬೈಲ್ ಕಿತ್ತೊಯ್ದಿದ್ದವರ ಬಂಧನ

Last Updated 20 ಫೆಬ್ರುವರಿ 2022, 21:27 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕ ಪ್ರಿಯಾಂಕ್ ಖರ್ಗೆ ಪತ್ನಿ ಶ್ರುತಿ ಅವರ ಮೊಬೈಲ್ ಕಿತ್ತೊಯ್ದಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಮೋಹಿನ್ ಖಾಜಾ, ತೋಹಿದ್, ಜಬೀ ಹಾಗೂ ಇಲಿಯಾಸ್ ಬಂಧಿತರು. ಫೆ. 6ರಂದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳುತ್ತಿದ್ದ ವೇಳೆ ಶ್ರುತಿ ಅವರ ಮೊಬೈಲ್ ಕಿತ್ತೊಯ್ಯಲಾಗಿತ್ತು. ಪ್ರಿಯಾಂಕ್ ಅವರ ಆಪ್ತ ಸಹಾಯಕ ನೀಡಿದ್ದ ದೂರು ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳು, ಸುಲಿಗೆಯನ್ನೇ ವೃತ್ತಿ ಮಾಡಿಕೊಂಡಿದ್ದರು. ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಹೈಗ್ರೌಂಡ್ಸ್, ಸರ್ಜಾಪುರ, ಮಂಡ್ಯ ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಗಳಲ್ಲಿ ನಡೆದಿದ್ದ 180 ಸುಲಿಗೆ ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿದ್ದರು.’

‘ಎಚ್‌ಎಸ್‌ಆರ್‌ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕ್ಯಾಬ್‌ ಚಾಲಕರೊಬ್ಬರಿಗೆ ಆರೋಪಿಗಳು ಚಾಕುವಿನಿಂದ ಇರಿದು ಸುಲಿಗೆ ಮಾಡಿದ್ದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಅವರು ತಿಳಿಸಿದರು.

ದಿನಕ್ಕೆ ಎರಡು ಬಾರಿ ಕೃತ್ಯ: ‘ಸಾರ್ವಜನಿಕ ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕದ್ದಿದ್ದ ಆರೋಪಿಗಳು, ನಗರದಲ್ಲಿ ಸುತ್ತಾಡಿ ಕೃತ್ಯ ಎಸಗುತ್ತಿದ್ದರು. ಆ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.

‘ಬೆಳಿಗ್ಗೆ 5 ಗಂಟೆಯಿಂದ 7 ಗಂಟೆ ಹಾಗೂ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ದಿನದಲ್ಲಿ ಎರಡು ಬಾರಿ ಆರೋಪಿಗಳು ಕೃತ್ಯ ಎಸಗುತ್ತಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರನ್ನು ಹಿಂಬಾಲಿಸಿ, ಮೊಬೈಲ್ ಕಿತ್ತೊಯ್ಯುತ್ತಿದ್ದರು. ಕೆಲವೆಡೆ ವಾಹನಗಳನ್ನು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದರು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT