ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದಕ್ಕಿಂತ ಹೆಚ್ಚು ಕೋವಿಡ್-19 ಪ್ರಕರಣಗಳಿದ್ದರೆ ಕಂಟೈನ್ಮೆಂಟ್‌: ಆರೋಗ್ಯ ಇಲಾಖೆ

Last Updated 3 ಮಾರ್ಚ್ 2021, 21:20 IST
ಅಕ್ಷರ ಗಾತ್ರ

ಬೆಂಗಳೂರು: ವಸತಿ ಸಮುಚ್ಛಯ ಸೇರಿದಂತೆ ಯಾವುದೇ ಪ್ರದೇಶದಲ್ಲಿ ಐದು ಅಥವಾ ಐದಕ್ಕಿಂತಲೂ ಹೆಚ್ಚು ಕೋವಿಡ್‌ ಪ್ರಕರಣಗಳು ವರದಿಯಾದರೆ ಆ ಸ್ಥಳವನ್ನು ಕಂಟೈನ್ಮೆಂಟ್‌ ವಲಯ ಎಂದು ಗುರುತಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ತಾಂತ್ರಿಕ ಸಲಹಾ ಸಮಿತಿ ಸಲಹೆಗಳ ಆಧಾರದ ಮೇಲೆ ಇಲಾಖೆಯು ಕೆಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ, ಕೆಲವು ಪ್ರದೇಶಗಳಲ್ಲಿ ಮಾತ್ರ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಇಂತಹ ಪ್ರದೇಶವನ್ನು ಕಂಟೈನ್ಮೆಂಟ್‌ ವಲಯ ಎಂದು ಘೋಷಿಸುವುದರ ಜತೆಗೆ ಆ ಪ್ರದೇಶದಲ್ಲಿ ಹೆಚ್ಚು ಪರೀಕ್ಷೆ ನಡೆಸುವ ಮೂಲಕ ಸೋಂಕು ಹರಡದಂತೆ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಸೂಚಿಸಿದೆ.

15 ದಿನಗಳಿಗೊಮ್ಮೆ ಪರೀಕ್ಷೆ:ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್, ಹೋಟೆಲ್, ರೆಸ್ಟೋರೆಂಟ್ ಹಾಗೂ ಎ್ಲ ವಿಧದ ಕಚೇರಿಗಳಲ್ಲಿ ಪ್ರತಿ ಕಾರ್ಯನಿರ್ವಹಿಸುವ ಸಿಬ್ಬಂದಿ ಪ್ರತಿ 15 ದಿನಗಳಿಗೊಮ್ಮೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಲಾಗಿದೆ. ಮಾಸ್ಕ್ ಧರಿಸುವುದರ ಜೊತೆಗೆ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಸ್ಯಾನಿಟೈಸರ್ ಬಳಕೆ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದೂ ಹೇಳಿದೆ.

ಸೋಂಕಿತರ ಜತೆಗೆ ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆಗೆ ಸ್ಥಳೀಯ ಆಡಳಿತ ಸಂಸ್ಥೆಗಳು, ಮಾರ್ಷಲ್‌ಗಳು ಹಾಗೂ ಪೊಲೀಸರ ನೆರವು ಪಡೆಯಲು ಇಲಾಖೆ ಸೂಚಿಸಿದೆ.

ಚಾಲಕರಿಗೆ ಪರೀಕ್ಷೆ ಕಡ್ಡಾಯ

ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಈ ರಾಜ್ಯಗಳಿಂದ ಬರುವ ಸರಕು, ಸಾಗಣೆ ವಾಹನಗಳ ಚಾಲಕರು ಹಾಗೂ ಸಹಾಯಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಚಾಲಕರು ಹಾಗೂ ಸಹಾಯಕರು ಪ್ರತಿ 15 ದಿನಗಳಿಗೆ ಒಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡುವುದು ಹಾಗೂ ನೆಗೆಟಿವ್ ಪರೀಕ್ಷೆ ವರದಿ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ನೆಗಟಿವ್ ವರದಿ ಹೊಂದಿದವರಿಗೆ ಮಾತ್ರವೇ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕು. ವರದಿಯ ಜತೆಗೆ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT