ಬೆಂಗಳೂರು: ಆಸ್ತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಬಾಬಾ ರೆಡ್ಡಿ ಎಂಬುವರಿಗೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನು ರಾಮಮೂರ್ತಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೃತನ ಸಹೋದರಿಯ ಪತಿ ಗೋಪಾಲ್ ರೆಡ್ಡಿ (54) ಹಾಗೂ ಅಣ್ಣನ ಮಗ ಭರತ್ (28) ಎಂಬುವವರು ಬಂಧಿತರು.
ಬಾಬು ರೆಡ್ಡಿ ಅವರು ಪಿತ್ರಾರ್ಜಿತ ಆಸ್ತಿಯಲ್ಲಿ ತನ್ನ ಅಣ್ಣ ಹಾಗೂ ತಂಗಿಗೆ ಪಾಲು ನೀಡಿರಲಿಲ್ಲ ಹಾಗೂ ನಿವೇಶನವನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದರು ಎಂದು ಆರೋಪಿಸಿದ್ದಾರೆ. ಇದರಿಂದ ಎರಡೂ ಕಡೆಯವರ ಮಧ್ಯೆ ಜಗಳ ನಡೆಯುತ್ತಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು.
ಆಸ್ತಿ ಹಂಚಿಕೆ ವಿಚಾರವಾಗಿ ಶುಕ್ರವಾರ ರಾತ್ರಿ ಮಾತುಕತೆಗಾಗಿ ವಿಜಿನಾಪುರದಲ್ಲಿ ಎಲ್ಲರೂ ಸೇರಿದ್ದರು. ಈ ವೇಳೆ ಸಿಟ್ಟಿಗೆದ್ದ ಗೋಪಾಲ್ ರೆಡ್ಡಿ ಹಾಗೂ ಭರತ್ ಚಾಕುವಿನಿಂದ ಇರಿದಿದ್ದರು. ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಬಾಬುರೆಡ್ಡಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರು. ರಾಮಮೂರ್ತಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಬ್ಯಾಗ್ ಕಳವು: ವೈಟ್‌ಫೀಲ್ಡ್ ವಿಭಾಗದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಡೆಲಿವರಿ ಬಾಯ್ ಪಾರ್ಸೆಲ್ ಬ್ಯಾಗ್ ಅನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಯುವಕರು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.
ಆಗಸ್ಟ್ 1ರಂದು ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಳ್ಳರ ಕೈಚಳಕದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಂಚನೆ :
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಸಂತೋಷ್ ಕುಮಾರ್ ಎಂಬುವರಿಗೆ ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಅರ್ಚನೆಗೆ ಆನ್‌ಲೈನ್ ಮೂಲಕ ಟಿಕೆಟ್ ಕೊಡಿಸುವುದಾಗಿ ಹೇಳಿ ಅಪರಿಚಿತ ವ್ಯಕ್ತಿಯೊಬ್ಬ₹ 25 ಸಾವಿರ ಪಡೆದು ವಂಚನೆ ಮಾಡಿದ್ದಾನೆ.
ಸಂತೋಷ್ ಅವರು ಟಿಟಿಡಿ ವೆಬ್‌ಸೈಟ್ ಪರಿಶೀಲನೆ ನಡೆಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯ ಪರಿಚಯವಾಗಿ, ಟಿಕೆಟ್ ಕೊಡಿಸುವುದಾಗಿ ಹೇಳಿ ತನ್ನ ಖಾತೆಗೆ ಹಣ ಹಾಕಿಸಿಕೊಂಡಿದ್ದಾನೆ. ಬಳಿಕ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಈ ಬಗ್ಗೆ ಸಂತೋಷ್ ಅವರು ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.