ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಾಳಿ ಆಂಜನೇಯ ದೇಗುಲದ ಬಳಿ ಸಮಾನಾಂತರ ಕಾಲುವೆ: ₹11 ಕೋಟಿ ಯೋಜನೆ– ಸಿಎಂ

Published 23 ಮೇ 2024, 0:12 IST
Last Updated 23 ಮೇ 2024, 0:12 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಪ್ರವಾಹ ನಿಯಂತ್ರಿಸಲು ಸಮಾನಾಂತರ ಕಾಲುವೆ ನಿರ್ಮಿಸಬೇಕು. ₹11.5 ಕೋಟಿ ವೆಚ್ಚದ ಈ ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ನಗರದಲ್ಲಿ ಮಳೆಯಿಂದ ಸಮಸ್ಯೆಗೆ ಒಳಗಾಗುವ ಪ್ರದೇಶಗಳಿಗೆ ಮುಖ್ಯಮಂತ್ರಿಯವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸಬೇಕು. ಕಾಲಮಿತಿಯಲ್ಲಿ ಕೆಲಸವಾಗಬೇಕು. ಇಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಅಮಾನತು ಮಾಡಲಾಗುತ್ತದೆ ಎಂದು ಬಿಬಿಎಂಪಿ ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್‌ಗೆ ಸೂಚಿಸಿದರು.

ನಾಯಂಡಹಳ್ಳಿ: ‘ಇಲ್ಲಿನ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತದೆ. ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ₹7 ಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆಯ ಅನುಮೋದನೆ ಅಗತ್ಯವಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

‘ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆಯಿಂದ ಅನುಮೋದನೆ ಕೊಡಿಸಿ’ ಎಂದು ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರಿಗೆ ಮುಖ್ಯಮಂತ್ರಿ ಸೂಚಿಸಿದರು. ಒಂದು ವರ್ಷದಲ್ಲಿ ಕಾಮಗಾರಿ ಮುಗಿಯಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ತಾಕೀತು ಮಾಡಿದರು.

ಕೋಡಿ ಚಿಕ್ಕನಹಳ್ಳಿ: 'ರಾಜಕಾಲುವೆ ಯಿಂದ ನೀರು ಹೊರಗೆ ಹರಿದು, ಮನೆಗಳಿಗೆ ನೀರು ನುಗ್ಗುತ್ತಿದೆ. ಹೊರ ಬರುವ ನೀರನ್ನು ಪಂಪ್‌ ಮಾಡಿ ಮಡಿವಾಳ ಕೆರೆಗೆ ಹರಿಸಬೇಕು. ಮಡಿವಾಳ ಕೆರೆಗೆ ಕಾಲುವೆ ನಿರ್ಮಾಣದ ₹4.3 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲು ಸಿದ್ದರಾಮಯ್ಯ ಸೂಚಿಸಿದರು.

ಸಿಲ್ಕ್‌ ಬೋರ್ಡ್‌, ಹೊಸೂರು ಮುಖ್ಯರಸ್ತೆ: ನಮ್ಮ ಮೆಟ್ರೊ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಪರ್ಯಾಯ ವ್ಯವಸ್ಥೆ ಮಾಡಲು ₹4.5 ಕೋಟಿ ಕಾಮಗಾರಿ ಅಗತ್ಯವಿದೆ. ಇದಕ್ಕೆ ಸರ್ಕಾರದ ಉನ್ನತಾಧಿಕಾರ ಸಮಿತಿಯ ಅನುಮತಿ ಅಗತ್ಯವಿದೆ ಎಂದು ತುಷಾರ್‌ ಗಿರಿನಾಥ್‌ ಹೇಳಿದರು.

10-15 ವರ್ಷಗಳ ದೂರದೃಷ್ಟಿ ಯಿಂದ ಕ್ರಿಯಾ ಯೋಜನೆ ರೂಪಿಸಿ, ಮುಂದಿನ ಉನ್ನತಾಧಿಕಾರ ಸಮಿತಿ ಸಭೆ ಮುಂದೆ ಯೋಜನೆ ಮಂಡಿಸಿ ಎಂದು ಮುಖ್ಯಮಂತ್ರಿ ಹೇಳಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೂ ಇದ್ದರು.

ಗುತ್ತಿಗೆದಾರರ ಬದಲಿಸಿ

‘ಆರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈಜಿಪುರ ಮೇಲ್ಸೇತುವೆ ಕಾಮಗಾರಿ ವಿಳಂಬವಾಗುತ್ತಿದೆ. 2023ರ ನ.20ರಂದು ಬಿಎಸ್‌ಸಿ ಪಿಎಲ್‌ ಕಂಪನಿಗೆ ಕಾಮಗಾರಿ ಮುಂದುವರಿಸಲು ಕಾರ್ಯಾದೇಶ ನೀಡಲಾಗಿದೆ. ಶೇ 4ರಿಂದ 6ರಷ್ಟು ಮಾತ್ರ ಪ್ರಗತಿಯಾಗಿದೆ’ ಎಂದು ತುಷಾರ್‌ ಗಿರಿನಾಥ್‌ ಹೇಳಿದರು.

ಸ್ಥಳದಲ್ಲಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಯವರು, ‘ಕಾಮಗಾರಿ ಮಾಡಲು ಸಾಧ್ಯವಿಲ್ಲದಿದ್ದರೆ ಜಾಗ ಖಾಲಿ ಮಾಡು’ ಎಂದರು. ‘ಗುತ್ತಿಗೆ ದಾರರಿಗೆ ನಿಯಮಾನುಸಾರ ನೋಟಿಸ್‌ ನೀಡಿ, ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಟೆಂಡರ್‌ ರದ್ದುಪಡಿಸಿ’ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT