ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಕಾ ಯಾತ್ರೆಗೆ ನಲಪಾಡ್‌: ಹೈಕೋರ್ಟ್‌ಗೆ ಅರ್ಜಿ

Last Updated 3 ಮೇ 2019, 20:37 IST
ಅಕ್ಷರ ಗಾತ್ರ

ಬೆಂಗಳೂರು: ‌ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ ಮೊಹಮ್ಮದ್ ನಲಪಾಡ್, ಮೆಕ್ಕಾ ಯಾತ್ರೆಗೆ ತೆರಳಲು ಅನುಮತಿ ಕೋರಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಈ ಕುರಿತ ಅರ್ಜಿಯು ಶುಕ್ರವಾರ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ರಜಾ ಕಾಲದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಆದರೆ, ದಿನದ ಕಲಾಪ ಅವಧಿ ಮುಗಿದ ಕಾರಣ ನ್ಯಾಯಪೀಠ ವಿಚಾರಣೆಯನ್ನು ಇದೇ 8ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ನಲಪಾಡ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ‘ಅರ್ಜಿದಾರರಿಗೆ ಹೈಕೋರ್ಟ್ ಈ ಹಿಂದೆಯೇ ಜಾಮೀನು ಮಂಜೂರು ಮಾಡಿದೆ. ಆದರೆ, ವಿಚಾರಣಾ ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ವ್ಯಾಪ್ತಿ ಪ್ರದೇಶ ಬಿಟ್ಟು ಹೊರ ಹೋಗುವಂತಿಲ್ಲ ಎಂಬ ಷರತ್ತು ವಿಧಿಸಲಾಗಿದೆ. ಅರ್ಜಿದಾರರು ಮೆಕ್ಕಾ ಯಾತ್ರೆಗೆ ತೆರಳಲು ಬಯಸಿದ್ದಾರೆ. ಆದ್ದರಿಂದ ಅದಕ್ಕೆ ಅನುಮತಿ ನೀಡಿ ಜಾಮೀನು ಷರತ್ತು ಸಡಿಲಗೊಳಿಸಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಾಸಿಕ್ಯೂಷನ್‌ ಪರ ವಕೀಲ ಎಂ.ಎಸ್.ಶ್ಯಾಮಸುಂದರ್, ‘ಅರ್ಜಿದಾರರು ಮೆಕ್ಕಾ ಯಾತ್ರೆಗೆ ತೆರಳುತ್ತಿದ್ದೇನೆ ಎಂದು ಹೇಳಿರುವ ಕಾರಣ ಷರತ್ತು ಸಡಿಲಿಸುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದಾಗ್ಯೂ ಇದು ನ್ಯಾಯಾಲಯದ ವಿವೇಚನೆಗೆ ಒಳಪಟ್ಟ ವಿಚಾರ’ ಎಂದರು.

ನಗರದ ಫರ್ಜಿ ಕಫೆಯಲ್ಲಿ 2018ರ ಫೆಬ್ರುವರಿ 17ರಂದು ರಾತ್ರಿ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಮತ್ತು ಸಹಚರರು, ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT