ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ತೆರವಿಗೆ ನಾಮ್ ಕೆ ವಾಸ್ತೆ ಕಾರ್ಯಾಚರಣೆಯಿಂದ ಪ್ರಯೋಜವಿಲ್ಲ’ ಎಂದು ಹೈಕೋರ್ಟ್ ಕಿಡಿ ಕಾರಿದೆ.
ಈ ಕುರಿತಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಹೈಕೋರ್ಟ್‌ನ ಈ ಹಿಂದಿನ ಆದೇಶಗಳ ಪಾಲನೆ ಬಗ್ಗೆ ಬಿಬಿಎಂಪಿ ಸಲ್ಲಿಸಿದ್ದ ವರದಿಯನ್ನು, ಪರಿಶೀಲಿಸಿದ ನ್ಯಾಯಪೀಠ, ‘ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಿ ಮೌನ ವಹಿಸಲಾಗಿದೆ. ಕೆಲವೇ ಕೆಲವು ವ್ಯಕ್ತಿಗಳ ವಿರುದ್ಧ, ಅದರಲ್ಲೂ ಆರ್ಥಿಕವಾಗಿ ಶಕ್ತಿವಂತರಲ್ಲದ, ಬಡವರ ವಿರುದ್ಧ ನಾಮ್ ಕೆ ವಾಸ್ತೆ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ’ ಎಂದು ನ್ಯಾಯಪೀಠ ಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡಿತು.
‘ತೆರವು ಕಾರ್ಯ ಕೈಗೊಳ್ಳಲು ಹೆಚ್ಚುವರಿ ಮಾನವ ಸಂಪನ್ಮೂಲ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲಾಗಿತ್ತು. ಆದರೆ, ಆ ನಿರ್ದೇಶನ ಪಾಲನೆ ಆಗಿದೆಯೋ ಇಲ್ಲವೋ ಎಂಬುದನ್ನು ಇನ್ನೂ ತಿಳಿಸಿಲ್ಲ’ ಎಂದು ಅಸಮಾಧಾನ ಹೊರಹಾಕಿತು.
‘ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮತ್ತು ಅಭಿವೃದ್ದಿ ಹೊಂದುತ್ತಿರುವ ನಗರವಾಗಿದೆ. ಕಟ್ಟಡಗಳ ನಿರ್ಮಾಣ ನಿರಂತರವಾಗಿ ನಡೆಯುತ್ತಿರುತ್ತದೆ. ಅವುಗಳನ್ನು ರಾತ್ರೋರಾತ್ರಿ ನಿಲ್ಲಿಸಲಾಗದು. ಮೇಲ್ವಿಚಾರಣೆಗೆ ನಿರಂತರ ಮತ್ತು ಸಮಗ್ರ ಕ್ರಮ ಅಗತ್ಯವಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಸರ್ಕಾರ ಸೇರಿದಂತೆ ಎಲ್ಲ ಬಾಧ್ಯಸ್ಥರೂ ಒಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂಬುದು ಕೋರ್ಟ್ ನಿರೀಕ್ಷೆ’ ಎಂದು ಹೇಳಿತು.
‘ಮೂರು ವಾರಗಳಲ್ಲಿ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿಸಿದ ಸಂಸ್ಥೆಗಳು ಸಭೆ ನಡೆಸಿ ಸಮಗ್ರ ಕ್ರಿಯಾ ಯೋಜನೆ ಹಾಗೂ ಈ ಹಿಂದಿನ ಆದೇಶಗಳ ಅನುಪಾಲನಾ ವರದಿಯನ್ನೂ ಸಲ್ಲಿಸಬೇಕು’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಪ್ರಕರಣದಲ್ಲಿ ಅಮಿಕಸ್ ಕ್ಯೂರಿ (ಕೋರ್ಟ್ ಗೆ ಸಹಕರಿಸುವ ವಕೀಲ) ಆಗಿ ಹಿರಿಯ ವಕೀಲ ಪ್ರಮೋದ್ ಕಠಾವಿ ಅವರನ್ನು ನೇಮಕ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.