ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಹತ್ಯೆ: ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Published 24 ಏಪ್ರಿಲ್ 2024, 0:18 IST
Last Updated 24 ಏಪ್ರಿಲ್ 2024, 0:18 IST
ಅಕ್ಷರ ಗಾತ್ರ

ಬೆಂಗಳೂರು: ‘ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆಯನ್ನು ಖಂಡಿಸಿ’ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಕಾರ್ಯಕರ್ತೆಯರು, ನೇಹಾ ಹಿರೇಮಠ ಭಾವಚಿತ್ರದ ಎದುರು ಮೇಣದ ಬತ್ತಿಗಳನ್ನು ಹೊತ್ತಿಸಿ ಶ್ರದ್ದಾಂಜಲಿ ಸಲ್ಲಿಸಿದರು.

‘ಹಿಂದೂಗಳಿಗೆ ರಕ್ಷಣೆ ನೀಡದ ತುಘಲಕ್ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದ ಕಾರ್ಯಕರ್ತೆಯರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ‘ನೇಹಾ ಅವರನ್ನು ಚಾಕುವಿನಿಂದ 13-14 ಬಾರಿ ಇರಿದು ಕೊಲೆ ಮಾಡಲಾಗಿದೆ. ಈ ಧೈರ್ಯ ಆರೋಪಿ ಫಯಾಜ್‍ಗೆ ಹೇಗೆ ಬಂತು? ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿರುವ ಇಂಥ ಸಂದರ್ಭದಲ್ಲಿ ಸಮಾಜದ್ರೋಹಿಗಳು ಹಾಗೂ ದೇಶದ್ರೋಹಿಗಳ ಕೈ ಮೇಲಾಗುತ್ತಿದೆ’ ಎಂದು ಆರೋಪಿಸಿದರು.

‘ಹಿಂದೂ ಯುವಕರನ್ನು ಕೊಲೆ ಮಾಡುತ್ತಿದ್ದ, ಹಿಂದೂ ಯುವತಿಯರನ್ನು ಲವ್ ಜಿಹಾದ್‌ ಬಲೆಗೆ ಬೀಳಿಸುತ್ತಿದ್ದ ಹಾಗೂ ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿದ್ದ ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ, ಇದೇ ಸಂಘಟನೆಯ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು’ ಎಂದು ದೂರಿದರು.

‘ರಾಜ್ಯದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ರಾಮನವಮಿಯಂದು ಜೈಶ್ರೀರಾಮ್ ಎಂಬುದಾಗಿ ಕೂಗಿದವರ ಮೇಲೆ ಹಲ್ಲೆ ನಡೆಯುತ್ತಿದೆ. ಯಾದಗಿರಿಯಲ್ಲಿ ಪರಿಶಿಷ್ಟ ಜಾತಿಯ ಯುವಕನನ್ನು ಕೊಲೆ ಮಾಡಲಾಗಿದೆ. ರಾಜ್ಯದಲ್ಲಿ ಸಮಾಜದ್ರೋಹಿಗಳ ಅಟ್ಟಹಾಸ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಯಾವುದೇ ಶಿಕ್ಷೆ ಕೊಡುತ್ತಿಲ್ಲ’ ಎಂದು ಕಿಡಿಕಾರಿದರು.

ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ಆಶಾ ರಾವ್, ಕೇಂದ್ರ ಘಟಕದ ಅಧ್ಯಕ್ಷೆ ರೇಖಾ ಗೋವಿಂದ, ದಕ್ಷಿಣ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಆನಂದ್ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT